ಕರಿಕೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ದೂರು
ಮಡಿಕೇರಿ, ಎ.13: ಕರಿಕೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರಿಕೆ ವ್ಯಾಪ್ತಿಯ ಕುಂಡತ್ತಿಕಾನ, ಬಾಳೆಬಳಪ್ಪು, ಕುಡಿಯಂಗಲ್ಲು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದ ಪ್ರಮುಖರು ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ.
ಜನವಸತಿ ಪ್ರದೇಶದ ಕೆಲವು ಮನೆ ಮತ್ತು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯವನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ದಂಧೆ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೆ ದಂಧೆಕೋರರು ಅಧಿಕಾರಿಗಳು ಸ್ಥಳಕ್ಕೆ ಬರುವ ಮಾಹಿತಿ ಪಡೆದುಕೊಂಡು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಸಾಕ್ಷಿ ಸಹಿತ ಎಲ್ಲೂ ಸಿಕ್ಕಿ ಹಾಕಿಕೊಳ್ಳುತ್ತಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೇ ಇದ್ದು, ದುಡಿದ ಹಣವನ್ನು ದುಪ್ಪಟ್ಟು ದರದ ಅಕ್ರಮ ಮದ್ಯಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರು ಹಾಗೂ ಮಕ್ಕಳ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ. ಕುಂಡತ್ತಿಕಾನ, ಬಾಳಬಳಪ್ಪು, ಕುಡಿಯಂಗಲ್ಲು, ಆಲತ್ತಿಕಡವು, ಚೆತ್ತುಕಾಯ ಚೇರಿ ಮೊದಲಾದ ಕಡೆ ಮನೆ ಮತ್ತು ಸಣ್ಣ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಗ್ರಾಮಸಭೆಗಳಲ್ಲಿ ಗಮನ ಸೆಳೆದಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದರೂ ಸ್ಪಂದನ ದೊರೆತ್ತಿಲ್ಲ ಆರೋಪಿಸಿದ ಗ್ರಾಮಸ್ಥರು, ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.