ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ

Update: 2024-09-09 18:13 GMT

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜನರ ದೈನಂದಿನ ಬದುಕಿಗೆ ಅಡಚಣೆಯಾಗಿದೆ. ಅಲ್ಲದೆ ಕೃಷಿ ಫಸಲಿಗೆ ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮೈಕೊರೆಯುವ ಚಳಿ ಇದೆ. ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ಜನ ಮತ್ತು ವಾಹನಗಳ ಸಂಚಾರಕ್ಕೆ ತೊಡಕನ್ನುಂಟು ಮಾಡುತ್ತಿದೆ. ಹೊಂಡ ಗುಂಡಿಗಳಾಗಿರುವ ಮಡಿಕೇರಿ ನಗರದ ಬಹುತೇಕ ರಸ್ತೆಗಳು ಮಳೆಯಿಂದ ಕೆಸರುಮಯವಾಗಿದೆ. ಗ್ರಾಮೀಣ ಭಾಗದಲ್ಲೂ ಅತ್ಯಧಿಕ ಮಳೆಯಾಗುತ್ತಿದ್ದು, ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಕಾವೇರಿಯ ಕ್ಷೇತ್ರ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲು ಉತ್ತಮ ಮಳೆಯಾಗುತ್ತಿದೆ. ಕಳೆದೊಂದು ದಿನದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಇಂಚಿಗೂ ಹೆಚ್ಚಿನ ಮಳೆ ದಾಖಲಾಗಿದೆ. ನದಿ ಪಾತ್ರದ ನಾಪೋಕ್ಲು, ಬಲಮುರಿ, ಮೂರ್ನಾಡು, ಸಿದ್ದಾಪುರ ಭಾಗಗಳಲ್ಲು ಮಳೆಯಾಗುತ್ತಿದೆ.

ಕೃಷಿಗೆ ಹಾನಿ

ಅತಿಯಾದ ಮಳೆಗೆ ಒಂದೆಡೆ ಕಾಫಿ ಕೃಷಿಗೆ ಅಪಾರ ಹಾನಿಯುಂಟಾಗುತ್ತಿದ್ದು, ಕಾಫಿ ಕಾಯಿಗಳು ಕೊಳೆತು ಉದುರುತ್ತಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಬೆನ್ನಲ್ಲೆ ಇದೀಗ ಅಲ್ಲಲ್ಲಿ ಭತ್ತದ ಗದ್ದೆಗಳಲ್ಲಿ ಕೀಟ ಬಾಧೆ ಕಾಣಿಸಿಕೊಳ್ಳುತ್ತಿದೆ.

ಕೊಡಗು ಜಿಲ್ಲೆಯ ಮಳೆ ವಿವರ

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 10.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.20 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2686.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1366.82 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 17.87 ಮಿ.ಮೀ. ಕಳೆದ ವರ್ಷ ಇದೇ ದಿನ 25.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3882.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2327.61 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2402.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1063.56 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 37.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2496.32 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1172.66 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3041.31 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1445.19 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1608.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 825.10 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 24.40, ನಾಪೋಕ್ಲು 7.40, ಸಂಪಾಜೆ 18.50, ಭಾಗಮಂಡಲ 21.20, ವಿರಾಜಪೇಟೆ 8, ಅಮ್ಮತ್ತಿ 8, ಹುದಿಕೇರಿ 6.40, ಶ್ರೀಮಂಗಲ 17.60, ಪೊನ್ನಂಪೇಟೆ 8, ಬಾಳೆಲೆ 6, ಸೋಮವಾರಪೇಟೆ 10.20, ಶನಿವಾರಸಂತೆ 4.60, ಶಾಂತಳ್ಳಿ 20, ಕೊಡ್ಲಿಪೇಟೆ 10, ಕುಶಾಲನಗರ 4.60, ಸುಂಟಿಕೊಪ್ಪ 9 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.57 ಅಡಿಗಳು. ಕಳೆದ ವರ್ಷ ಇದೇ ದಿನ 2856.44 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 3.80 ಮಿ.ಮೀ., ಕಳೆದ ವರ್ಷ ಇದೇ ದಿನ 4.60 ಮಿ.ಮೀ., ಇಂದಿನ ನೀರಿನ ಒಳಹರಿವು 2242 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2403 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1375 ಕ್ಯುಸೆಕ್. ನಾಲೆಗೆ 600 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. 

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News