ಮಕ್ಕಳು ಪಠ್ಯದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು: ಸಭಾಪತಿ ಬಸವರಾಜ ಹೊರಟ್ಟಿ
ಕೋಲಾರ,ನ,8 : ಮಕ್ಕಳು ಪಠ್ಯದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಹ ವರ್ಷವಿಡೀ ಸಕ್ರಿಯವಾಗಿ ಭಾಗವಹಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ.
ಶುಕ್ರವಾರ ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಅಥ್ಲೇಟಿಕ್ಸ್ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕ್ರೀಡಾಕೂಟವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿರುವ ಜಿಲ್ಲಾಆಡಳಿತಕ್ಕೆ, ಆಯೋಜಕರನ್ನು ಶ್ಲಾಘಿಸಿದ ಅವರು ಎಲ್ಲಾ ಕ್ರೀಡೆಗಳಲ್ಲಿ ಶಿಸ್ತಿನಿಂದ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದರು.
ಇಲ್ಲಿ ಭಾಗವಹಿಸಿದ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಆದರೆ ಎಲ್ಲರೂ ಭಾಗವಹಿಸಬಹುದು ಎಲ್ಲರೂ ಕ್ರೀಡಾ ಸ್ಫೂರ್ತಿ ಇಂದ ಆಟವಾಡಿ ಎಂದು ಎಲ್ಲಾ ಮಕ್ಕಳಿಗೆ ಕಿವಿಮಾತು ಹೇಳಿದರು.
ಮಾನ್ಯ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮಾತನಾಡಿ ರಾಜ್ಯ ಮಟ್ಟದ ಕ್ರೀಡಾಕೂಟ 3 ದಿನಗಳ ಕಾಲ ಆಯೋಜಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ೪ ಸಾವಿರ ಮಂದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಜರಿದ್ದಾರೆ, ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಿ ಎಂದು ತಿಳಿಸಿದರು.
ರಾಜ್ಯಮಟ್ಟದ ಕ್ರೀಡಾಕೂಟವನ್ನು ಜಿಲ್ಲೆಯಲ್ಲಿ ನಡೆಸಲು ಅವಕಾಶ ಸಿಕ್ಕಿದೆ, ಈಗಾಗಲೇ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ರಾಜ್ಯದ ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ೩೫ ಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ನಗರದ ಎಲ್ಲಾ ಪ್ರಮುಖ ಶಾಲೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದ ಅವರು, ಸೂಚಿಸಿರುವ ಜಿಲ್ಲೆಯ ವಿದ್ಯಾರ್ಥಿಗಳನ್ನು ಆಯಾ ಶಾಲೆಗಳಿಗೆ ತಲುಪಿಸಿ, ಅಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸುವಲ್ಲಿ ಅಲ್ಲಿನ ಮುಖ್ಯಸ್ಥರು ಗಮನಹರಿಸಬೇಕು ಎಂದು ತಿಳಿಸಿದರು.
ಮೂರು ದಿನಗಳ ಕಾಲವೂ ವಸತಿ ವ್ಯವಸ್ಥೆ ಇರುವ ಶಾಲೆಗಳಿಂದ ಮಕ್ಕಳನ್ನು ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಕರೆತರಲು ಮತ್ತು ನಂತರ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಅತಿ ಮುಖ್ಯವಾಗಿದ್ದು, ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾಕೂಟಕ್ಕೆ ಆಗಮಿಸಿರುವ ಸುಮಾರು 3500 ಮಕ್ಕಳು ಹಾಗೂ 500 ಮಂದಿ ಶಿಕ್ಷಕರಿಗೆ ಊಟದ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಹತ್ತಿರವಾಗಿರುವ ನೂತನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್, ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರು ಗೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ವಿಜಯಲಕ್ಷ್ಮಿ ಜಿಲ್ಲಾ ಶಿಕ್ಷಣಾಧಿಕಾರಿಗಳಾದ ವೀಣಾ,ಸಗೀರಾ ಅಂಜುಂ, ಬಿಸಿಯೂಟ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ, ವಿಷಯ ಪರಿವಿಕ್ಷಕ ಸಮೀಉಲ್ಲಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್, ಸೇರಿದಂತೆ ಎಲ್ಲಾ ಮುಖ್ಯಶಿಕ್ಷಕರು, ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದರು.