ಕೋಲಾರ | ಅರಣ್ಯ ಜಮೀನು ಒತ್ತುವರಿ ತೆರವಿಗೆ ಅಡ್ಡಿ ಆರೋಪ: ಸಂಸದ ಸಹಿತ 20 ಮಂದಿ ವಿರುದ್ಧ ಪ್ರಕರಣ ದಾಖಲು

Update: 2023-09-10 08:51 GMT

ಕೋಲಾರ, ಸೆ.10: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಾರಮಾಕನಹಳ್ಳಿಯಲ್ಲಿ ಅರಣ್ಯ ಇಲಾಖೆ ಮತ್ತೆ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಮುಂದಾಗಿದ್ದು, ಈ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ ಸಹಿತ 20ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸರು ಸುಮಾರು15ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.

20 ದಿನಗಳ ಹಿಂದೊಮ್ಮೆ ಅರಣ್ಯ ಒತ್ತುವರಿ ತೆರವು ನಡೆಸಿದ್ದ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಶನಿವಾರ ಮತ್ತೆ ಮುಂದುವರಿಸಲು ಮುಂದಾಗಿತ್ತು. ಈ ವೇಳೆ ತೀವ್ರ ವಿರೋಧ ವ್ಯಕ್ತಪಡಿಸಿದ ಸ್ಥಳೀಯರು ಕಾರ್ಯಾಚರಣೆಗಿಳಿದ ಐದು ಜೇಸಿಬಿಗಳ ಮೇಲೆ ಕಲ್ಲು ಮತ್ತು ದೊಣ್ಣೆಗಳಿಂದ ದಾಳಿ ನಡೆಸಿ ಅದರ ಗಾಜುಗಳನ್ನು ಒಡೆದು ಆಕ್ರೋಶಪಡಿಸಿದ್ದರು. ಸ್ಥಳಕ್ಕೆ ಆಗಮಿಸಿದ್ದ ಸಂಸದ ಮುನಿಸ್ವಾಮಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

20ಕ್ಕೂ ಅಧಿಕ ಜನರ ಮೇಲೆ ಪ್ರಕರಣ, 15 ಮಂದಿಯ ಬಂಧನ

ಈ ನಡುವೆ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದಲ್ಲಿ ಕೋಲಾರ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ, ವಾಹನಗಳ ಮೇಲೆ ಕಲ್ಲು ತೂರಾಟ, ಅರಣ್ಯ ಇಲಾಖೆ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ, ಕಾನೂನು ಸುವ್ಯವಸ್ಥೆ ದಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ.

15ಕ್ಕೂ ಅಧಿಕ ಮಂದಿಯನ್ನು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.

ಆತ್ಮಹತ್ಯೆಗೆ ಯತ್ನ

ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಲ್ಲಿ ಪತಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಶ್ಯಾಮಲಮ್ಮ ಹಾಗೂ ಲಕ್ಷ್ಮಿದೇವಮ್ಮ ಎಂಬವರು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News