ಮೋದಿಯನ್ನು ಸೋಲಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ಮಾಡಬೇಕು : ಸಿಎಂ ಸಿದ್ದರಾಮಯ್ಯ
ಕೋಲಾರ : "ಮೋಸಗಾರ, ಲೂಟಿಕೋರ ಬಿಜೆಪಿಯನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಮೋದಿಯನ್ನು ಸೋಲಿಸಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕು ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ - 2ಗೆ ಚಾಲನೆ ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
"ಕಾಂಗ್ರೆಸ್ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷಗಳು ಚುನಾವಣೆ ನಂತರ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ" ಎಂದು ತಿಳಿಸಿದರು.
ʼಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಅವರು ಅಧಿಕೃತ ಅಭ್ಯರ್ಥಿಯಾಗಿದ್ದು, ಎಲ್ಲರೂ ಹಸ್ತದ ಗುರುತಿಗೆ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಡಿʼ ಎಂದು ಮನವಿ ಮಾಡಿದರು.
"ಇಲ್ಲಿಯವರೆಗೂ 36 ಸಾವಿರ ಕೋಟಿ ಖರ್ಚು ಮಾಡಿದ್ದೇವೆ. ಇನ್ನೂ ಉಳಿಕೆ ಹಣವನ್ನು ಖರ್ಚು ಮಾಡುತ್ತೇವೆ. ಆದರೆ, ಬಿಜೆಪಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದರು ಆದರೆ, ಏನೂ ಮಾಡಿಲ್ಲ. ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಅಡುಗೆ ಅನಿಲ 412 ರಿಂದ 1150 ಕ್ಕೆ ಏರಿಕೆ ಮಾಡಿದರು. ಇದೇನಾ ಅಚ್ಚೇ ದಿನ ಅಂದ್ರೆ ಮೋದಿ ಜೀ" ಎಂದು ಪ್ರಶ್ನೆ ಮಾಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ನಝೀರ್ ಅಹ್ಮದ್, ಎಸ್.ಎನ್.ನಾರಾಯಣಸ್ವಾಮಿ, ಚಿತ್ರ ನಟ ಸಾಧುಕೋಕಿಲ, ಮದನ್ ಪಟೇಲ್, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಸೇರಿದಂತೆ ಲೋಕಸಭಾ ಕ್ಷೇತ್ರದ ಶಾಸಕರು ಹಾಗೂ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.