ಕೊಪ್ಪಳ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ಸಾಬೀತು : ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಕೊಪ್ಪಳ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ ತೀರ್ಪು ನೀಡಿದೆ.
ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಶೌಕತ್ಅಲಿ ಗುಡ್ಡದಬಾವಿ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರಿಂದ ಬಾಧಿತಳು ಅವನೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದಳು, 2023ರ ಏ.3ರಂದು ಬಾಲಕಿ ಟ್ಯೂಶನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ, ಎಲ್ಲಿಯಾದರೂ ಹೋಗಿ ಮದುವೆಯಾಗೋಣ ಎಂದು ಹೇಳಿ ತನ್ನ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಿ ಅದೇ ದಿನ ಸಂಬಂಧಿಕರ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ ನಂತರ ಬಾಧಿತಳಿಗೆ ಆರೋಪಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಮರುದಿನ ಕೂಡ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕುಷ್ಟಗಿ ಪೋಲಿಸ್ ಠಾಣೆಯಲ್ಲಿ ಪಿ.ಎಸ್.ಐ ಚಂದ್ರಶೇಖರ ಅವರು ದೂರು ಸ್ವೀಕರಿಸಿದ್ದರು. ಪ್ರಕರಣದ ತನಿಖೆಯನ್ನು ಸಿಪಿಐ ನಿಂಗಿಪ್ಪ ಅವರು ನಿರ್ವಹಿಸಿದ್ದು, ತನಿಖೆಯಲ್ಲಿ ಆರೋಪಿಯ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬಿತಾಗಿದ್ದರಿಂದ ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್ಸಿ[ಪೋಕ್ಸೊ] ಸಂ: 30/2023ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿ ಶೌಕತ್ಅಲಿ ಗುಡ್ಡದಬಾವಿ ಇತನ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂ. ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ[ಪೋಕ್ಸೊ] ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಡಿ.5, 2024ರಂದು ತೀರ್ಪು ಹೊರಡಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ಅವರು ಈ ಪ್ರಕರಣದ ವಾದ ಮಂಡಿಸಿದ್ದರು. ಕುಕನೂರ ಪೊಲೀಸ್ ಠಾಣೆಯ ಸಿಬ್ಬಂದಿ ಹನುಮೇಶ ಜಗ್ಗಲ್ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.