ಮಧ್ಯಪ್ರದೇಶ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ?

Update: 2023-12-05 05:50 GMT

Photo: PTI

ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕಮಲನಾಥ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ನಿರೀಕ್ಷೆ ಇದೆ.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಸೋಮವಾರ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರನ್ನು ಭೇಟಿ ಮಾಡದೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಕಮಲ್ನಾಥ್ ಅವರ ಕ್ರಮ ಕಾಂಗ್ರೆಸ್ ನಾಯಕತ್ವದ ಆಕ್ರೋಶಕ್ಕೆ ಕಾರಣವಾಗಿದ್ದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ತಕ್ಷಣ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಕಮಲ್ನಾಥ್ ನಡೆಗಳ ಬಗ್ಗೆ ಕಾಂಗ್ರೆಸ್ ನ ಕೇಂದ್ರ ನಾಯಕತ್ವ ತೀವ್ರ ಅಸಮಾಧಾನ ಹೊಂದಿದೆ ಎನ್ನಲಾಗಿದ್ದು, ಸ್ಥಾನ ಹೊಂದಾಣಿಕೆಗೆ ಸಂಬಂಧಿಸಿದಂತೆ ಇಂಡಿಯಾ ಕೂಟದ ನಾಯಕರಾದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಜೆಡಿಯು ಮುಖಂಡ ನಿತೀಶ್ ಕುಮಾರ್ ವಿರುದ್ಧ ನೀಡಿದ ಹೇಳಿಕೆ ಪಕ್ಷಕ್ಕೆ ಇರಿಸು ಮುರಿಸು ಉಂಟುಮಾಡಿದೆ ಎನ್ನಲಾಗಿದೆ.

ಕಮಲ್ನಾಥ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ 2018ರ ಚುನಾವಣೆಯಲ್ಲಿ 114 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ಆದರೆ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಬಲ 66ಕ್ಕೆ ಕುಸಿದಿದೆ. ಅಲ್ಪಮತಕ್ಕೆ ಕುಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ರಾಜ್ಯದಲ್ಲಿ ಚುಕ್ಕಾಣಿ ಹಿಡಿಯಿತು. ಶಿವರಾಜ್ ಸಿಂಗ್ ಚೌಹಾಣ್ ಮತ್ತೆ ಮುಖ್ಯಮಂತ್ರಿಯಾಗಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲ 230 ಸದಸ್ಯಬಲದ ವಿಧಾನಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಸಂಪಾದಿಸಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News