ಮಂಡ್ಯ | ಕಾರಿಗೆ ಸಾರಿಗೆ ಬಸ್ ಢಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಮೃತ್ಯು
Update: 2025-03-01 19:24 IST

ಮಂಡ್ಯ : ಕಾರು ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಕಾರಿನ ಚಾಲಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕು ಕೆ.ಎಂ.ದೊಡ್ಡಿ ಸಮೀಪದ ಬೋರಾಪುರ ಬಳಿ ಶನಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯ ಸಾಫ್ಟ್ ವೇರ್ ಇಂಜಿನಿಯರ್ ವಿ.ಮನು(36) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಸ್ವಗ್ರಾಮ ಕೆ.ಎಂ.ದೊಡ್ಡಿಗೆ ವಿ.ಮನು ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಾಗ ಮಳವಳ್ಳಿಯಿಂದ ಮದ್ದೂರಿಗೆ ಬರುತ್ತಿದ್ದ ಸಾರಿಗೆ ಬಸ್ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬಸ್‍ನ ಮುಂದಿನ ಚಕ್ರ ಪಂಕ್ಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮನು ಅವರನ್ನು ಮದ್ದೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಗೆ ಕರೆತರುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.