ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯ ತೂಬಿನಕೆರೆ ಬಳಿ ಐರಾವತ ಬಸ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಜೆ.ಪಿ.ನಗರದ ನಿವಾಸಿಗಳಾದ ನಿವೃತ್ತ ಅಭಿಯಂತರ ಚಂದ್ರರಾಜೇ ಅರಸ್(62), ಅವರ ಪತ್ನಿ ಸುವೇಧಿನಿ ರಾಣಿ(50), ಸತ್ಯಾನಂದರಾಜೇ ಅರಸ್(51) ಮತ್ತು ಅವರ ಪತ್ನಿ ನಿಶ್ಚಿತಾ(45) ಅಪಘಾತದಲ್ಲಿ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.
ಕುಟುಂಬದ ನಾಲ್ವರು ಕಾರಿನಲ್ಲಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಕಾರು ಚಲಾಯಿಸುತ್ತಿದ್ದ ಚಂದ್ರರಾಜೇ ಅರಸ್, ತೂಬಿನಕೆರೆ ಬಳಿ ಎಕ್ಸ್‌ಪ್ರೆಸ್ ಹೈವೇಯಲ್ಲಿ ಎಕ್ಸಿಟ್ ತೆಗೆದುಕೊಳ್ಳುವ ವೇಳೆ ಗೊಂದಲ ಉಂಟಾಗಿ ಮತ್ತೆ ಹೈವೇ ಕಡೆಗೆ ಚಾಲನೆಗೆ ಯತ್ನಿಸಿದಾಗ ಬೆಂಗಳೂರಿನಿಂದ ಮೈಸೂರಿಗೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಐರಾವತ ಬಸ್ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮೃತರ ದೇಹಗಳನ್ನು ಮಂಡ್ಯ ಮಿಮ್ಸ್ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂಬಂಧ ಮಂಡ್ಯ ಗ್ರಾಮಾಂತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.