87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮಂಡ್ಯ ಡಿ.20: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಕ್ಷರ ಜಾತ್ರೆ ಆರಂಭಗೊಂಡಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ
ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.
ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಹಾಗೂ ಮುಖ್ಯ ವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.