ನಾಗಮಂಗಲ ಗಲಭೆ ಪ್ರಕರಣ: ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅಮಾನತು

Update: 2024-09-13 05:56 GMT

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ  ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು, ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ‌. ವರದಿ ಬಂದ ನಂತರ ಕಾನೂನು ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದು ಹೇಳಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News