ಮಾಜಿ ಸಚಿವ ನಾರಾಯಣಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ : ಸಚಿವ ಚಲುವರಾಯಸ್ವಾಮಿ

Update: 2024-03-25 16:39 GMT

ಮಂಡ್ಯ: ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಮತ್ತು ಕೆ.ಆರ್.ಪೇಟೆಯ ಅವರ ಬೆಂಬಲಿಗರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾರಾಯಣಗೌಡ ಅಲ್ಲದೆ, ಅವರ ಜತೆಗೆ ಹೋಗಿದ್ದ ದಿವಂಗತ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ ಬೆಂಬಲಿಗರೂ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಅಂಬರೀಷ್ ಕುಟುಂಬದ ಜತೆಗೆ ಮೊದಲಿನಿಂದಲೂ ಆತ್ಮೀಯ ಸಂಬಂಧ ಇದೆ. ಆದರೆ, ಕಾಂಗ್ರೆಸ್‍ಗೆ ಬೆಂಬಲ ಕೊಡಿ ಎಂದು ಸಂಸದೆ ಸುಮಲತಾ ಅವರನ್ನು ನಾವು ಕೇಳಿಲ್ಲ, ಅವರೂ ಹೇಳಿಲ್ಲ. ಬೆಂಬಲ ಕೊಡ್ತೀನಿ ಅಂದರೆ ಬೇಡ ಅನ್ನೋಕೆ ಆಗುತ್ತಾ? ಎಂದು ಅವರು ಪ್ರತಿಕ್ರಿಯಿಸಿದರು.

ರಾಮನಗರ ಜಿಲ್ಲೆಯವರು ಕುಮಾರಸ್ವಾಮಿ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದ್ದಾರೆ. ಹಾಗಾಗಿ ಮಂಡ್ಯಕ್ಕೆ ಹೋಗಬಾರದೆಂದು ಅಲ್ಲಿನ ಕಾರ್ಯಕರ್ತರು ಹೇಳುತ್ತಿದ್ದಾರೆ. ಕುಮಾರಸ್ವಾಮಿ, ಮತ್ತೆ ಯಾರಾದರೂ ಮಂಡ್ಯದಲ್ಲಿ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸುತ್ತಿದ್ದೇವೆ. ಈಗಾಗಲೇ ಒಂದು ಸುತ್ತು ನಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆದಿದೆ. ರಾಷ್ಟ್ರ ನಾಯಕರೂ ಪ್ರಚಾರಕ್ಕೆ ಬರಲಿದ್ದಾರೆ. ಎ.1ರಂದು ನಾಮಪತ್ರ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದರು.

ಶಾಸಕ ಪಿ.ರವಿಕುಮಾರ್ ಗಣಿಗ, ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News