ಮಂಡ್ಯ | ಬೆಳ್ಳೂರಿನಲ್ಲಿ ಗುಂಪು ಘರ್ಷಣೆ : ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್
ಮಂಡ್ಯ: ಬೈಕ್ ತಾಗಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಾಗಮಂಗಲ ತಾಲೂಕು ಬೆಳ್ಳೂರು ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಘಟನೆಯಲ್ಲಿ ಗುಂಪಿನಿಂದ ಹಲ್ಲೆಗೊಳಗಾದ ಅಭಿಲಾಷ್ ಎಂಬ ಯುವಕನನ್ನು ಬೆಳ್ಳೂರು ಕ್ರಾಸ್‌ಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅಲ್ಲಿಯೂ ಪೊಲೀಸ್ ನಿಯೋಜಿಸಲಾಗಿದೆ.
ಮೇ 25ರಂದು ಪಟ್ಟಣದ ಸಂತೆಬೀದಿಯಲ್ಲಿ ಯುವಕನೊಬ್ಬನ ಬೈಕ್ ಹಾಗೂ ಅಭಿಲಾಷ್, ಮತ್ತು ನಾಗೇಶ್ ಅವರ ಬೈಕ್ ನಡುವೆ ಸಣ್ಣ ಅಪಘಾತವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದ್ದು, ಆ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿ ಅಭಿಲಾಷ್ ಮನೆಗೆ ತೆರಳಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆರೋಪಿಸಿ ನೂರಾರು ಮಂದಿ ಬೆಳ್ಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ. ಪಟ್ಟಣದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್ ಕೂಡಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"ಘಟನೆಗೆ ಸಂಬಂಧಿಸಿದಂತೆ ದೂರು-ಪ್ರತಿದೂರು ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಯಾವ ಕಾರಣಕ್ಕೆ ಘರ್ಷಣೆ ಆಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು"
-ಎನ್.ಯತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ