ಮಂಡ್ಯ | ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಮೃತ್ಯು, ಹಲವರಿಗೆ ಗಾಯ

ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಚಲುವರಾಯಸ್ವಾಮಿ
ಮಂಡ್ಯ: ಕಬಡ್ಡಿ ಪಂದ್ಯಾವಳಿ ವೀಕ್ಷಣೆ ವೇಳೆ ವೀಕ್ಷಕರ ಗ್ಯಾಲರಿ ಕುಸಿದುಬಿದ್ದು ಓರ್ವ ಸಾವನ್ನಪ್ಪಿದ್ದು, ಮೂವರು ಮಕ್ಕಳೂ ಸೇರಿದಂತೆ ಸುಮಾರು 13 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಲ್ಲನಾಯಕಟ್ಟೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಪಾಪಣ್ಣಚಾರಿ ಸಾವನ್ನಪ್ಪಿದ್ದು, ಗಾಯಗೊಂಡವರ ಪೈಕಿ ಹಲವರಿಗೆ ಕೈ, ಕಾಲು ಮುರಿದಿದೆ. ಗಾಯಗೊಂಡವರನ್ನು ಮಿಮ್ಸ್ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ರವಿವಾರ ಆಸ್ಪತ್ರೆಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಇಂತಹ ಕಾರ್ಯಕ್ರಮಗಳು ನಡೆಯುವಾಗ ಆಯೋಜಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಗಾಯಗೊಂಡಿವರ ಚಿಕಿತ್ಸಾ ವೆಚ್ಚ ಸರಕಾರವೇ ಭರಿಸಲಿದೆ. ಮೃತ ಪಾಪಣ್ಣಾಚಾರಿ ಅವರ ಕುಟುಂಬಕ್ಕೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.