ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ರೈತರಿಂದ ಪ್ರತಿಭಟನೆ : ಬಡಗಲಪುರ ನಾಗೇಂದ್ರ

Update: 2024-07-13 17:19 GMT

ಮೈಸೂರು : ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಇದೇ ಜುಲೈ.18ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಅಂಕಿ ಅಂಶದ ಪ್ರಕಾರ ಶೇ.28ರಷ್ಟು ಮಳೆ ಪ್ರಮಾಣದ ಕೊರತೆ ಇದೆ. ಆಣೆಕಟ್ಟುಗಳು ಇನ್ನೂ ತುಂಬಿಲ್ಲ. ಈ ನಿಟ್ಟಿನಲ್ಲಿ ಪ್ರತಿ ದಿನ ಒಂದು ಟಿಎಂಸಿ ನೀರನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಳ್ಳಬೇಕು. ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ವಿ. ಸೋಮಣ್ಣ , ಶೋಭಾ ಕರಂದ್ಲಾಜೆ ಸೇರಿ ನಾಲ್ಕು ಜನ ಕೇಂದ್ರ ಮಂತ್ರಿಗಳು ಇದ್ದಾರೆ. ಎರಡು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ರೈತ ಹಿತ ಕಾಯುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು.

ಟ್ರಯಲ್ ಬ್ಲಾಸ್ಟ್ ಅವೈಜ್ಞಾನಿಕ ವಾಗಿದೆ ಎಂಬ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿರವರು ಸಭೆ ಕರೆಯಬೇಕು. ಪ್ರಜಾಪ್ರಭುತ್ವ ವಿರೋಧಿ ಆಡಳಿತ ನೋಡಿದ್ದೇವೆ. ಭ್ರಷ್ಟಾಚಾರ ಬಹಳ ಹೆಮ್ಮರವಾಗಿ ಬೆಳೆದಿತ್ತು. ಬಿಟ್ ಕಾಯಿನ್, ಪಿಎಸ್‌ ಐ ಹಗರಣ ಇತ್ಯಾದಿ ಭ್ರಷ್ಟಾಚಾರದಿಂದ ಬೇಸತ್ತು, ಜನಾಧಿಕಾರವನ್ನು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಕೊಟ್ಟಿದ್ದಾರೆ. ಭ್ರಷ್ಟಾಚಾರದಲ್ಲಿ ಕಳೆದ ಸರಕಾರಕ್ಕೂ ಈಗಿನ ಕಾಂಗ್ರೆಸ್ ಸರಕಾರಕ್ಕೂ ವ್ಯತ್ಯಾಸ ಇಲ್ಲ. ಕಾಂಗ್ರೆಸ್ ಸರಕಾರ ಎಸ್.ಟಿ.ನಿಗಮದಲ್ಲಿ 187ಕೋಟಿ ರೂ. ಹಗರಣ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿಲ್ಲ. ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಸಂಪೂರ್ಣವಾಗಿ ತಿದ್ದುಪಡಿ ಮಾಡಿಲ್ಲ. ಸ್ವಲ್ಪ ಆಶಾದಾಯಕವಾಗಿದೆ ಅಷ್ಟೇ. ರೈತರ ಆತ್ಮಹತ್ಯೆ ತಡೆಯುವ ಸಲುವಾಗಿ ಯಾವುದೇ ಯೋಜನೆ ಇಲ್ಲ. ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿ ಇದೆ. 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರ ರೈತರ ಆತ್ಮಹತ್ಯೆ ತಡೆಗಟ್ಟಲು ರೈತಪರ ಕಾರ್ಯಕ್ರಮ ರೂಪಿಸಿ ಆತ್ಮಸ್ಥೈರ್ಯ ತುಂಬಬೇಕು. ಕೃಷಿ ಉತ್ಪನ್ನಗಳಿಗೆ ಎಂಎಸ್‌ ಪಿ ನಿಗದಿ ಮಾಡಿ ಖರೀದಿಸಬೇಕು ಎಂದು ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರುಗಳಾದ ಹೊಸಕೋಟೆ ಬಸವರಾಜು, ಹೊಸೂರು ಕುಮಾರ್, ಪ್ರಸನ್ನ ಎನ್.ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News