ಅದಾನಿಯನ್ನು ತಕ್ಷಣವೇ ಬಂಧಿಸಿ, ತಪ್ಪಿಸಿಕೊಳ್ಳಲು ಬಿಡಬೇಡಿ: ಸಿಎಂ ಸಿದ್ಧರಾಮಯ್ಯ

Update: 2024-11-22 10:14 GMT

ಮೈಸೂರು,ನ.22: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದ್ದಾರೆ.

 ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆಯಲ್ಲವೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಶೇ4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ಮಾಡಿದ್ದು ಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದರು. ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ಉಸಿರೇ ಬಿಡ್ತಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದು ಸವಾಲು ಹಾಕಿದರು.‌

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳು ಸುಳ್ಳೇ ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ.  ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.

ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಜನರ ಬಳಿಗೆ ಹೋಗಿ ಆರ್.ಅಶೋಕ್ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ವಾಗ್ದಾಳಿ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News