ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಯಡಿಯೂರಪ್ಪ

Update: 2024-05-11 09:16 GMT

ಮೈಸೂರು, ಮೇ. 11: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರ ಬಿಜೆಪಿಗೆ, 2 ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದರ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಸಂಜೆ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ಆದ್ದರಿಂದ ರಾಜ್ಯ ಸರಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು' ಎಂದು ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದರು.

'ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಅವರು ಈಗಾಗಲೇ ಚಿಂತಿಸಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಕಾಂಗ್ರೆಸ್ನವರು ಏನೇ ಹೇಳಿದರೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ? ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ' ಎಂದರು

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News