ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ : ಸಿಎಂ ಸಿದ್ದರಾಮಯ್ಯ
ಮೈಸೂರು : ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, "ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಆದರೆ, ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ.15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪೇರಿ ಫೇರಲ್ ರಿಂಗ್ ರೋಡ್‌ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3000 ಕೋಟಿ ರೂ. ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ?. ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ" ಎಂದು ಪ್ರಶ್ನಿಸಿದರು.
ನಿರ್ಮಲಾ ಸೀತಾರಾಮನ್ ಈಗಲೂ ಸುಳ್ಳು ಹೇಳಿದ್ದಾರೆ :
ಎಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸ ಯೋಜನೆ ಬಂದಿದೆಯೇ?. ಕೈಗಾರಿಕಾ ಕಾರಿಡಾರ್ ಬಂದಿದೆಯೇ?. ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐಐಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ. ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.
ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ :
15ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ.31ರಷ್ಟು ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.
ಕರ್ನಾಟಕ ಭ್ರಷ್ಟ ರಾಜ್ಯವಲ್ಲ :
ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ ಎಂದರು.
ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ :
ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ದರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೆ, ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದರು.