ರೇಷ್ಮೆ ಬೆಳೆಯು ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ : ಎಚ್‌.ಡಿ.ಕುಮಾರಸ್ವಾಮಿ

Update: 2024-09-20 11:34 GMT

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ.ಕುಮಾರಸ್ವಾಮಿ ಅವರು ತಿಳಿಸಿದರು

ಶುಕ್ರವಾರ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ "ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಂ ಜುಬಿಲಿ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, "ದೇಶದ 27 ರಾಜ್ಯಗಳ ರೈತರು ತಮ್ಮನ್ನು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಮೈಸೂರು ಭಾಗದಲ್ಲಿ ರೇಷ್ಮೆ ಬೆಳೆ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು" ಎಂದರು.

ಕರ್ನಾಟಕದಲ್ಲಿ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಲೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ. ರೇಷ್ಮೆ ಬೆಳೆಗೆ ಕಳೆದ ಎರಡು ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ರೇಷ್ಮೆ ಬೆಳೆಗಾರರು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ರೂ. ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡಲಾಗಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂದಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಹೇಳಿದರು.

ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ದೂರ ದೃಷ್ಟಿಯಿಂದ ಕೇಂದ್ರೀಯ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಈ ಮಂಡಳಿಯ ಪ್ರಾರಂಭದಿಂದ ರೇಷ್ಮೆ ಬೆಳೆಯಲ್ಲಿ ಹಲವು ಆವಿಷ್ಕಾರ ಆಗಿದೆ ಎಂದರು.

ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರು ಮಾತನಾಡಿ, "ಶ್ಯಾಮ್ ಪ್ರಕಾಶ್ ಮುಖರ್ಜಿ ಅವರು ನಮ್ಮ ಮುಖಂಡರು. ಇವರು 1949 ರಲ್ಲಿ ಕೇಂದ್ರ ರೇಷ್ಮೆ ಮಂಡಳಿಯನ್ನು ಪ್ರಾರಂಭಿಸಿದರು. ಮೈಸೂರಿನ ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿಗೆ ರೇಷ್ಮೆಯನ್ನು ಪರಿಚಯಿಸಿದರು. ಮೈಸೂರು ರೇಷ್ಮೆ ಸೀರೆಗಳು ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು ರೇಷ್ಮೆ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ" ಎಂದರು.

ಕೇಂದ್ರ ಜವಳಿ ರಾಜ್ಯ ಸಚಿವರಾದ ಪವಿತ್ರ ಮಾರ್ಗರೇಟ್, "ಕನ್ನಡ ಭಾಷೆಯ ಹೆಚ್ಚು ಶ್ರೀಮಂತವಾದ ಭಾಷೆಯಾಗಿದೆ. ರೇಷ್ಮೆ ಬೆಳೆಯು ಅಬಿವೃದ್ದಿ ಹೊಂದಲು 1949ರಿಂದ ರೇಷ್ಮೆ ಮಂಡಳಿಯು ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ರೇಷ್ಮೆಯು ಒಂದು ಉತ್ತಮ ಉದ್ದಿಮೆಯಾಗಿದೆ. ದೇಶದ ರಾಷ್ಟ್ರೀಯ ಆದಾಯದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಇದು ಗ್ರಾಮೀಣ ಜನರ ಹಾಗೂ ಮಹಿಳೆಯರ ನೆಚ್ಚಿನ ಬೆಳೆಯಾಗಿದೆ" ಎಂದು ತಿಳಿಸಿದರು.

ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ.ವೆಂಕಟೇಶ್ ಅವರು ಮಾತನಾಡಿ, ರೇಷ್ಮೆ ಕರ್ನಾಟಕ ರಾಜ್ಯದಲ್ಲಿ ಪ್ರತಿಷ್ಠಿತ ಬೆಳೆಯಾಗಿದೆ. ಕೇಂದ್ರ ಸರಕಾರದಿಂದ ರೇಷ್ಮೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇಡೀ ವಿಶ್ವದಲ್ಲಿ ಮೈಸೂರು ರೇಷ್ಮೆ ಸೀರೆಗಳು ಹೆಚ್ಚು ಪ್ರಸಿದ್ಧಿ ಆಗಿವೆ. ರೇಷ್ಮೆ ಬೆಳೆಗಾರರಿಗೆ ಅನುಕೂಲಕರವಾದ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಮೈಸೂರಿಗೂ ರೇಷ್ಮೆಗೂ ಅವಿನಾಭಾವ ಸಂಬಂಧ ಇದೆ. ವಿಜಯನಗರ ಅರಸರ ಕಾಲದಿಂದ ರೇಷ್ಮೆ ಇಲ್ಲಿ ಪ್ರಚಲಿತದಲ್ಲಿ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೇಷ್ಮೆ ಬೆಳೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ರೇಷ್ಮೆ ಬೆಳೆಗೆ ಪ್ರೋತ್ಸಾಹ ನೀಡಲು ಎಲ್ಲಾ ರೀತಿಯಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಸಂಸದ. ಕೆ ಸುಧಾಕರ್ ಮಾತನಾಡಿ, ದೇಶದ 26 ರಾಜ್ಯಗಳಲ್ಲಿ ರೇಷ್ಮೆಯನ್ನು ಬೆಳೆಯುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಅಭಿವೃದ್ಧಿ ಹೊಂದಿರುವುದರಿಂದ ಇಳುವರಿಯೂ ಹೆಚ್ಚಾಗಿದೆ. ಅದೇ ರೀತಿ ಬೆಲೆಯೂ ಹೆಚ್ಚಾಗಿದೆ. ಮೈಸೂರಿಗೆ ಜರ್ಮನಿಯಿಂದ ರೇಷ್ಮೆ ಬೆಳೆಯನ್ನು ತಂದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಶಿಡ್ಲಘಟ್ಟದಲ್ಲಿ ಹೈಟೆಕ್ ಮಾರುಕಟ್ಟೆಯನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಜವಳಿ ಇಲಾಖೆಯ ಕಾರ್ಯದರ್ಶಿಗಳಾದ ರಚನಾ ಷಾ, ರೇಷ್ಮೆ ಇಲಾಖೆಯ ಆಯುಕ್ತರಾದ ರಾಜೇಶ್ ಗೌಡ, ಕೇಂದ್ರ ಜವಳಿ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಪ್ರಜಕ್ತ ಎಲ್ ವರ್ಮ ಅವರು ಸೇರಿದಂತೆ ರೇಷ್ಮೆ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News