ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ: ಸಿದ್ದರಾಮಯ್ಯ

Update: 2024-10-22 10:23 GMT

ಮೈಸೂರು, ಅ 22: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಅವರು ಮಾತನಾಡುತ್ತಿದ್ದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ರೂ. ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದಿಲ್ಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.

ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದಿಲ್ಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ. ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಘೋಷಿಸಿದರು.

ಸಿದ್ದರಾಮಯ್ಯ ಒಂದೇ ಒಂದು ರೂ. ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷಗಳಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂ ಖಾನ್, ಬೋಸ್ ರಾಜ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Full View 

 

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News