ಪ್ರಜಾಪ್ರಭುತ್ವ ದಿನಾಚರಣೆ | ಮೈಸೂರಿನಲ್ಲಿ ʼಮಾನವ ಸರಪಳಿʼ : ಕಾರ್ಯಕ್ರಮಕ್ಕೆ ಮೆರುಗು ನೀಡಿದ ದಸರಾ ಗಜಪಡೆ

Update: 2024-09-15 06:22 GMT

ಮೈಸೂರು : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ನಡೆದ ಮಾನವ ಸರಪಳಿ ಯಶಸ್ವಿಯಾಗಿ ನಡೆಯಿತು. ಈ ಮಾನವ ಸರಪಳಿಯಲ್ಲಿ ದಸರಾ ಗಜಪಡೆಗಳು ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು.

ರವಿವಾರ ಮೈಸೂರು ಜಿಲ್ಲಾ ವ್ಯಾಪ್ತಿಯ ಸಿದ್ಧಲಿಂಗಪುರ ಗಡಿಯಿಂದ ಆರಂಭವವಾಗಿ ಟಿ.ನರಸೀಪುರ ಗಡಿಯವರೆಗೂ ಸುಮಾರು 60 ಕೀ.ಮಿ ನಲ್ಲಿ 60 ಸಾವಿರ ಜನ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮೊದಲು ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್ ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ನಾಲ್ವಡಿ ಕೃಷ್ಣರಾಜ ಒಡೆಯರ್, ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಸಂವಿಧಾನ ಪೀಠಿಕೆಯನ್ನು ಓದಲಾಯಿತು.

ಸಿದ್ಧಲಿಂಗಪುರದಿಂದ ಆರಂಭವಾದ ಮಾನವ ಸರಪಳಿಯಲ್ಲಿ ವಿವಿಧ ಶಾಲಾ, ಕಾಲೇಜಿನ ಮಕ್ಕಳು, ಸರ್ಕಾರಿ ಇಲಾಖೆ ಅಧಿಕಾರಿಗಳು, ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದ್ದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ಮಾನವ ಸರಪಳಿ ಆರಂಭವಾಗುತ್ತಿದ್ದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳು ಭಾಗವಹಿಸಿ ಸೊಂಡಿಲನ್ನು ಮೇಲಕ್ಕೆತ್ತಿ ಗೌರವ ವಂದನೆ ಸಲ್ಲಿಸಿದವು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ತನ್ವೀರ್ ಸೆಠ್, ಕೆ.ಹರೀಶ್ ಗೌಡ, ಡಿ.ರವಿಶಂಕರ್, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮುಡಾ ಅಧ್ಯಕ್ಷ ಕೆ.ಮರೀಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿ.ಪಂ.ಸಿಇಓ ಕೆ.ಎಂ‌.ಗಾಯತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ, ಡಿಡಿಪಿಐ ಜವರೇಗೌಡ, ಸೇರಿದಂತೆ ಹಲವರು ಭಾಗವಹಿಸಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News