ʼಕರ್ನಾಟಕ ಬಂದ್ʼಗೆ ಮೈಸೂರಿನಲ್ಲಿ ನೀರಸ ಪ್ರತಿಕ್ರಿಯೆ

ಮೈಸೂರು: ಕರ್ನಾಟಕ ಬಂದ್‌ಗೆ ಮೈಸೂರಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಾಗರಿಕರಿಗೆ ಬಂದ್ ಬಿಸಿ ತಟ್ಟಲಿಲ್ಲ. ಗ್ರಾಮಾಂತರ ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆಗೆ ಮುಂದಾದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.
ಹೊಟೇಲ್, ಮಾರುಕಟ್ಟೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು ಕಾರ್ಯನಿರ್ವಹಿಸಿದವು. ಶಾಲಾ ಕಾಲೇಜುಗಳು ನಡೆಯಿತು. ಎಸ್ಸೆಸೆಲ್ಸಿ ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೇ ಪರೀಕ್ಷೆ ಬರೆದರು. ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು.
ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅಶೋಕ ರಸ್ತೆ, ಚಾಮರಾಜ ಜೋಡಿ ರಸ್ತೆ ಸೇರಿದಂತೆ ಪ್ರಮುಖ ವ್ಯಾಣಿಜ್ಯ ರಸ್ತೆಗಳಲ್ಲಿ ವ್ಯಾಪಾರ ವಹಿವಾಟು ನಡೆಯಿತು.
ಬಸ್ ತಡೆಯಲು ಯತ್ನ:
ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ತಡೆಯಲು ಯತ್ನಿಸಿದ ಕಾವೇರಿ ಕ್ರಿಯಾ ಸಮಿತಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಮುಂಭಾಗ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಮರಾಠಿ ಸಂಘಟನೆ ಮುಖಂಡರ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಂದ್‌ಗೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಂದ್‌ನಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಮುಂಜಾಗ್ರತೆ ವಹಿಸಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ, ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ತೆರೆದಿದ್ದ ಹೋಟೆಲ್‌ಗಳು, ಪೆಟ್ರೋಲ್ ಬಂಕ್‌ಗಳು:
ನಾಡಿನ ಭಾಷೆ ಮತ್ತು ಸಂಸ್ಕೃತಿಕಗೆ ದಕ್ಕೆ ಉಂಟಾದಾಗ ಪ್ರಮುಖವಾಗಿ ಬೆಂಬಲ ನೀಡುವವರೇ ಹೋಟೆಲ್ ಮಾಲೀಕರು ಹಾಗೂ ಪೆಟ್ರೋಲ್ ಬಂಕ್‌ನವರು. ಆದರೆ ಈ ಬಾರಿ ಹೋಟೆಲ್ ಮಾಲೀಕರು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದರ ಪರಿಣಾಮವಾಗಿ ನಗರದ ಪ್ರಮುಖವಾದ ಹೋಟೆಲ್‌ಗಳು ಹಾಗೂ ಪೆಟ್ರೋಲ್ ಬಂಕ್‌ಗಳು ತೆರೆದಿದ್ದವು.