ಮೈಸೂರು ಲೋಕಸಭಾ ಕ್ಷೇತ್ರದಿಂದ ಯದುವೀರ್‌ ಒಡೆಯರ್‌ ವಿರುದ್ಧ ಸ್ಪರ್ಧಿಸಲಿರುವ ಎಂ.ಲಕ್ಷ್ಮಣ್ ಪರಿಚಯ ಇಲ್ಲಿದೆ..

Update: 2024-03-22 06:53 GMT

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಹೊಸದಿಲ್ಲಿಯಲ್ಲಿ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಮೈಸೂರಿನಿಂದ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ನೀಡಲಾಗಿದೆ.

ಚುನಾವಣೆ ಘೋಷಣೆಗೂ ಮುನ್ನವೇ ಮೈಸೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. 14 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ದಿನಕ್ಕೊಂದರಂತೆ ಮೈಸೂರಿಂದ ಸ್ಪರ್ಧೆಗೆ ಹಲವರ ಹೆಸರು ಕೇಳಿ ಬಂದವು. ಕೊನೆಗೆ ಎಂ.ಲಕ್ಷ್ಮಣ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ವಕ್ತಾರರಾಗಿ ಸೇವೆ ಸಲ್ಲಿಸಿ ಪಕ್ಷ ಸಂಘಟನೆ ಜೊತೆಗೆ ವಿರೋಧ ಪಕ್ಷಗಳ ಟೀಕೆಗಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದರು. ಒಕ್ಕಲಿಗ ಸಮುದಾಯದ ಕೃಷಿಕ ಕುಟುಂಬದ ಮುದ್ದಲಿಂಗಯ್ಯ ಮತ್ತು ಸಾಕಮ್ಮ ದಂಪತಿ ಪುತ್ರನಾದ ಎಂ.ಲಕ್ಷ್ಮಣ್ ಇಂಜಿನಿಯರಿಂಗ್ ಪದವೀಧರರು. ಅವರು ಪತ್ನಿ ಇಬ್ಬರು ಮಕ್ಕಳ ಜೊತೆಗೆ ಮೈಸೂರಿನ ಯಾದವಗಿರಿಯಲ್ಲಿ ವಾಸಿಸುತ್ತಿದ್ದಾರೆ.

ಕಳೆದ 20 ವರ್ಷಗಳಿಂದ ಕಾಂಗ್ರೆಸ್‌ ನ ಕಾರ್ಯಕರ್ತರಾಗಿ ದುಡಿಯುತ್ತಿರುವ ಇವರು 2012 ಮತ್ತು 2018ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳಿಂದ ಪರಾಭವಗೊಂಡಿದ್ದರು.

ಬಳಿಕ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಕೆಪಿಸಿಸಿ ವಕ್ತಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಡಗು ಉಸ್ತುವಾರಿಯಾಗಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ನ ಗೆಲುವಿಗೆ ಶ್ರಮಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಇವರು ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡುವವರಿಗೆ ಸಮರ್ಥವಾಗಿ ಉತ್ತರವನ್ನು ನೀಡುತ್ತಿದ್ದರು. ಕಾಂಗ್ರೆಸ್ನ ವಕ್ತಾರರಾಗಿ ಆಡಳಿತ ಪಕ್ಷದ ಭ್ರಷ್ಟಾಚಾರವನ್ನು ಬಯಲಿಗೆಳೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪಸಿಂಹ ಅವರ ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದರು. ಪಕ್ಷದ ಕುರಿತು ಆರೋಪ ಮಾಡುವವರಿಗೆ ದಾಖಲೆ ಸಮೇತ ತಿರುಗೇಟು ಕೊಟ್ಟು ಅವರ ಬಾಯಿ ಮುಚ್ಚಿಸುವಲ್ಲಿ ಲಕ್ಷ್ಮಣ್ ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಲಕ್ಷ್ಮಣ್, ಸಿದ್ದರಾಮಯ್ಯ ವಿರುದ್ಧ ಪ್ರತಾಪಸಿಂಹ ನೀಡುತ್ತಿದ್ದ ಪ್ರತಿಯೊಂದು ಹೇಳಿಕೆಗೂ ಸುದ್ದಿಗೋಷ್ಠಿ ನಡೆಸಿ ಸಮರ್ಥವಾದ ಉತ್ತರ ನೀಡುತ್ತಿದ್ದರು. ಇವರ ಮಾತಿನ ವರಸೆಗೆ ಬೆಚ್ಚಿಬಿದ್ದ ಪ್ರತಾಪಸಿಂಹ ತಮ್ಮ ವಿರುದ್ಧ ಲಕ್ಷ್ಮಣ್ ಮಾತನಾಡದಂತೆ ಕೋರ್ಟ್ನಿಂದ ತಡೆಯಾಜ್ಞೆಯನ್ನು ತಂದಿದ್ದರು.ಇಷ್ಟೆಲ್ಲದರ ಜೊತೆಗೆ ಕಾಂಗ್ರೆಸ್ ಪಕ್ಷದ ಜನಪ್ರಿಯ ಕಾರ್ಯಕ್ರಮಗಳನ್ನು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಎಂ.ಲಕ್ಷ್ಮಣ್ ಸೇರಿದಂತೆ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕಾಂಗ್ರೆಸ್ ಮುಖಂಡರಾದ ಶುಶ್ರೂತ್ ಗೌಡ, ಜೆ.ಜೆ.ಆನಂದ್ ಸೇರಿದಂತೆ 14 ಮಂದಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಆಕಾಂಕ್ಷಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಒಲಿದು ಬಂದ ಅದೃಷ್ಟಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೇನಾನಿಯಾಗಿ ಕೆಲಸ ಮಾಡುತ್ತೇನೆ: ವಿಜಯಕುಮಾರ್

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ದೂರವಾಣಿ ಮೂಲಕ ‘ವಾರ್ತಾಭಾರತಿ’ಯೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ತಾಯಿ ಇದ್ದಂತೆ. ೨೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸೇನಾನಿಯಂತೆ ಪಕ್ಷದ ಕೆಲಸವನ್ನು ಮಾಡುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಪಾಲನೆ ಮಾಡುತ್ತೇನೆ ಎಂದು ಹೇಳಿದರು.

ನಾನು ಸಹ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಹಿಂದೆ ಎರಡು ಬಾರಿ ವಿಧಾನಸಭೆ ಮತ್ತು ವಿಧಾನಪರಿಷತ್‌ಗೂ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಪಕ್ಷ ನನಗೆ ಅವಕಾಶ ಮಾಡಿಕೊಡಲಿಲ್ಲ. ಆದರೂ ಪಕ್ಷದ ನಿಷ್ಠಾವಂತ ಸೈನಿಕನಂತೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸಿದ್ದರಾಮಯ್ಯ ಏನು ಸೂಚಿಸುತ್ತಾರೊ ಅದನ್ನು ಪ್ರಶ್ನೆ ಮಾಡುವುದಿಲ್ಲ. ನಿಷ್ಠೆಯಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News