ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ : ಎಂ.ಲಕ್ಷ್ಮಣ್

Update: 2024-08-17 11:52 GMT

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ, ಅಶೋಕ್ ಅವರು ಪ್ರಭಾವ ಬಳಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿನಡೆಸಿ ಮಾತನಾಡಿದ ಅವರು, "ಸಿದ್ದರಾಮಯ್ಯ ಯಾವಾಗ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರೊ ಅಂದಿನಿಂದಲೇ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬ್ಲೂ ಪ್ರಿಂಟ್ ರೆಡಿ ಮಾಡಿದರು" ಎಂದು ಆರೋಪಿಸಿದರು.

ʼರಾಜಭವನವನ್ನು ಬಿಜೆಪಿ-ಜೆಡಿಎಸ್ ಕಚೇರಿ ಮಾಡಿಕೊಂಡಿರುವುದು ದುರ್ದೈವ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡಬೇಕು ಎಂದು ರಾಜ್ಯಪಾಲರಿಗೆ 10 ತಿಂಗ ಹಿಂದೆಯೇ ಲೋಕಾಯುಕ್ತ ದೂರು ನೀಡಿದೆ. ಹೀಗಿದ್ದರೂ ಕೂಡ ರಾಜ್ಯಪಾಲರು ಅನುಮತಿ ನೀಡಿಲ್ಲ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಆರೋಪ ಇದೆ. ಕಾನೂನು ಕ್ರಮ ಕೈಗೊಳ್ಳಲು ಅನುಮತಿ ಕೇಳಿದರೂ ರಾಜ್ಯಪಾಲರು ನೀಡಲು ಮುಂದಾಗಿಲ್ಲʼ ಎಂದು ಟೀಕಿಸಿದರು.

ಟಿ.ಜೆ ಅಬ್ರಹಾಂ ಸಿಎಂ ವಿರುದ್ಧ ದೂರು ಕೊಟ್ಟ ಕೆಲವೇ ಕ್ಷಣಗಳಲ್ಲಿ ಸಿಎಂಗೆ ನೋಟಿಸ್ ನೀಡಲಾಗುತ್ತದೆ. ಇಂದು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಸಿಎಂ ವಿರುದ್ಧ ದೂರು ಕೊಟ್ಟಿರುವುದು ಯಾರು?. ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರದ ದಾಹದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ-ಜೆಡಿಎಸ್ ಪಕ್ಷದ ಹುನ್ನಾರವನ್ನು ಜನ ಅರಿತುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರ ಅಸ್ಥಿರಗೊಳಿಸಲಿಲು ಮುಂದಾಗಿದೆ. ಬಿಜೆಪಿ-ಜೆಡಿಎಸ್ ಹುನ್ನಾರ ಫಲಿಸಲ್ಲ. ರಾಜ್ಯಾದ್ಯಂತ ನಮ್ಮ ಪ್ರತಿಭಟನೆಗಳು ಪ್ರಾರಂಭ ಆಗುತ್ತದೆ. ಕೆಲವರು ಕಾಂಗ್ರೆಸ್ ಹೆಸರಿನಲ್ಲಿ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಇಂತಹ ಪ್ರತಿಭಟನೆಗಳಿಗೆ ಕಾಂಗ್ರೆಸ್ ಹೊಣೆಯಲ್ಲ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದರು.

ಪಕ್ಷವೇ ಬೆಂಬಲಕ್ಕಿದೆ : ಸಿದ್ಧರಾಮಯ್ಯ ಅವರ ಪರ ಸರ್ಕಾರ ಮತ್ತು ಇಡೀ ಪಕ್ಷವೇ ಬೆಂಬಲಕ್ಕಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದರ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕು ಎಂದು ಪಕ್ಷದ ಹೈಕಮಾಂಡ್ ಸೂಚನೆ ಕಾಯುತ್ತಿದ್ದೇವೆ. ಇಂದು ಸಂಜೆಯೊಳಗೆ ಸೂಚನೆ ಬರುತ್ತದೆ.‌ ಬಂದ ನಂತರ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಬಿ.ಎಂ.ರಾಮು, ಎಂ.ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್, ಗಿರೀಶ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News