ಶಾಲಾ ಮಕ್ಕಳಿಗೆ ಬೈಸಿಕಲ್ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ : ಮಧು ಬಂಗಾರಪ್ಪ
ಮೈಸೂರು : ಶಾಲಾ ಪಠ್ಯ ಪಠ್ಯಪುಸ್ತಕ ಪರಿಷ್ಕರಣೆ ಕಳೆದ ವರ್ಷವೇ ಮಾಡಲಾಗಿದ್ದು, ಈ ವರ್ಷ ಕೆಲವು ಪದ ಹಾಗೂ ವಾಕ್ಯಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಪರಿಷ್ಕೃತ ಪಠ್ಯಪುಸ್ತಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಶೇ.95ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ. ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಕೋವಿಡ್ ನಂತರ ಶಾಲಾ ಮಕ್ಕಳಿಗೆ ಬೈಸಿಕಲ್ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಸರ್ಕಾರ ಸಂಪುಟದಲ್ಲಿ ಚರ್ಚಿಸಿ ವಿತರಿಸಲು ನಿರ್ಧರಿಸಲಾಗುವುದು' ಎಂದು ಮಾಹಿತಿ ನೀಡಿದರು.
ಶೂ ವಿತರಿಸಲು ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲಾಗುವುದು. ಬಿಬಿಎಂಪಿ ಶಾಲೆಗಳನ್ನು ಇಲಾಖೆ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕವಾಗಿದ್ದು, ಈ ಬಗ್ಗೆ ಜೂನ್.4ರ ನಂತರ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.