ಸಂಸದರ ಅಮಾನತು ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ: ಸಿದ್ದರಾಮಯ್ಯ ವಾಗ್ದಾಳಿ

Update: 2023-12-22 14:50 GMT

ಮೈಸೂರು, ಡಿ.22: ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಸತ್ ಸದಸ್ಯರನ್ನು ಅಮಾನತು ಮಾಡಿರುವುದು. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಪ್ರಜಾಪ್ರಭುತ್ವ ಎಲ್ಲಿದೆ ಎಂಬ ಪ್ರಶ್ನೆ ಎದುರಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ಅಭಿಪ್ರಾಯಗಳು ವ್ಯಕ್ತವಾಗವಾಗಬೇಕು. ಆದರೆ ಅದಕ್ಕೆಲ್ಲಾ ಅವಕಾಶ ಕೊಡದೆ 146 ಮಂದಿ ಸಂಸದರನ್ನು ಅಮಾನತು ಮಾಡುವುದು ಎಂದರೆ ಏನರ್ಥ? ಇದು ಸರ್ವಾಧಿಕಾರಿ ಧೋರಣೆಯಲ್ಲದೆ ಇನ್ನೇನು? ದೇಶದ ಜನ ಇವರ ನಡವಳಿಕೆಗಳನ್ನು ಗಮನಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನ ಇದನ್ನೆಲ್ಲಾ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಕೊರೋನ ಪ್ರಕರಣಗಳು ದಾಖಲಾಗುತ್ತಿದೆ. ಇದರ ಬಗ್ಗೆ ಜನ ಭಯ ಪಡಬೇಕಿಲ್ಲ, ಎಚ್ಚರಿಕೆಯಿಂದ ಇರಬೇಕು, ಮೈಸೂರಿನಲ್ಲೂ ಆರು ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ತಿಳಿದು ಬಂದಿದೆ. ಅವರಿಗೆಲ್ಲಾ ಟ್ರಾವೆಲ್ ಹಿಸ್ಟರಿ ಇಲ್ಲ. ಅವರಿಗೆ ಬೇರೆ ಬೇರೆ ರೋಗದ ಹಿನ್ನಲೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಹೇಳಿದರು.

ಪ್ರವಾಸಿ ತಾಣಗಳನ್ನು ಬಂದ್ ಮಾಡಬೇಕು ಎನ್ನುವ ವಿಚಾರ ಸದ್ಯಕ್ಕೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಿರುವ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಮೇಕೆದಾಟು, ಮಹದಾಯಿ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ ನಡೆಸಿದ್ದೇನೆ. ಅವರು ಅಮಿತ್ ಶಾ ಜೊತೆ ಮಾತನಾಡಿ ಡಿ.23ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ನರೇಗ ಯೋಜನೆಯಲ್ಲಿ 100 ದಿನ ಇರುವ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಬೇಕು ಎಂದು ಪತ್ರವನ್ನು ಬರೆಯಲಾಗಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News