ಮೈಸೂರು | ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ : 50ಕ್ಕೂ ಹೆಚ್ಚು ಮಂದಿಯ ಬಂಧನ
ಮೈಸೂರು : ಮೈಸೂರಿನ ಕೆ.ಆರ್.ಎಸ್.ಹಿನ್ನೀರಿನ ಬಳಿ ಶನಿವಾರ ತಡರಾತ್ರಿ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಮೈಸೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ನಿರ್ಬಂಧಿತ ಪ್ರದೇಶವಾದ ಇಲ್ಲಿ ಅನಧಿಕೃತವಾಗಿ ಪಾರ್ಟಿ ಆಯೋಜಿಸಿ, ಯುವಕ-ಯುವತಿಯರನ್ನು ಸಾಮಾಜಿಕ ಜಾಲತಾಣದ ಮೂಲಕ ಆಹ್ವಾನಿಸಲಾಗಿತ್ತು. ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಮೀನಿನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ಕೆಲವರು ಮಾದಕ ವಸ್ತುಗಳನ್ನು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದರು ಎನ್ನಲಾಗಿದೆ. ಮದ್ಯದ ಬಾಟಲಿಗಳು, ಭೋಜನ ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಮೂಲಕ ಅಬ್ಬರದ ಸಂಗೀತ ಏರ್ಪಡಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಂ ರಾವತರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.