ಮೈಸೂರು: ಶ್ರೀನಿವಾಸ್ ಪ್ರಸಾದ್ ರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಿದ್ದರಾಮಯ್ಯ
ಮೈಸೂರು, ಎ.13: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮ್ಮ ರಾಜಕೀಯ ವೈರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ನಗರದ ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಶನಿವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಸಂಬಂಧ ಮಾತುಕತೆ ನಡಸಿದ್ದಾರೆ.
ಕಳೆದ ತಿಂಗಳು 17ರಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರಾಜಕೀಯಕ್ಕೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಅವರ ಸಹೋದರ ರಾಮಸ್ವಾಮಿ, ಅವರ ಪುತ್ರ ಭರತ್ ರಾಮಸ್ವಾಮಿ ಮತ್ತು ಮೈಸೂರು, ಚಾಮರಾಜನಗರ ಜಿಲ್ಲೆಯ ವಿ.ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಸಿದ್ದರಾಮಯ್ಯ ಅವರೇ ಇಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಉಂಟು ಮಾಡಿದೆ.
ಹಳೇ ಮೈಸೂರು ಭಾಗದ ಪ್ರಭಾವಿ ದಲಿತ ನಾಯಕರಾಗಿರುವ ವಿ.ಶ್ರೀನಿವಾಸ್ ಪ್ರಸಾದ್ ಭೇಟಿ ರಾಜಕೀಯ ವಲಯದಲ್ಲಿ ದೊಡ್ಡ ಪರಿಣಾಮವನ್ನೇ ಬೀರಲಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ 2013ರಲ್ಲಿ ಕಂದಾಯ ಸಚಿವರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಬಳಿಕ ಸಚಿವ ಸಂಪುಟದಿಂದ ಕೈಬಿಡಲಾಗಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯರ ಜೊತೆ ಮುನಿಸಿಕೊಂಡಿದ್ದ ವಿ.ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ನಂಜನಗೂಡು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ಪರಾಭವಗೊಂಡಿದ್ದರು.
ನಂತರ 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಅಳಿಯ ಹರ್ಷವರ್ಧನ್ ಅವರನ್ನು ಬಿಜೆಪಿಯಿಂದ ನಿಲ್ಲಿಸಿ ಗೆಲ್ಲಿಸಿಕೊಂಡು ಬಂದಿದ್ದರು.
ಚುನಾವಣಾ ರಾಜಕಾರಣ ಸಾಕು ಎಂದು ಘೋಷಣೆ ಮಾಡಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಒತ್ತಡಕ್ಕೆ ಮಣಿದು 2019 ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ದಿವಂಗತ ಆರ್.ಧ್ರುವನಾರಾಯಣ ವಿರುದ್ಧ ಗೆಲವು ಸಾಧಿಸಿದ್ದರು.