ಆರ್.ಟಿ.ಐ ಕಾರ್ಯಕರ್ತರಾದ ಗಂಗರಾಜು, ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ದೂರು

Update: 2024-07-19 17:53 GMT

ಮೈಸೂರು : ಆರ್‌ಟಿಐ ಕಾರ್ಯಕರ್ತರಾದ ಗಂಗರಾಜು ಮತ್ತು ಸ್ನೇಹಮಹಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡುತ್ತಿರುವುದರ ಬಗ್ಗೆ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರಿಗೆ ದೂರು ನೀಡಲಾಗಿದೆ.

ನಗರದ ನಜರ್‌ಬಾದ್‌ನಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಶುಕ್ರವಾರ ಕಾಂಗ್ರೆಸ್ ನಿಯೋಗ ತೆರಳಿ ದೂರು ಸಲ್ಲಿಸಿದೆ.

ಈ ವೇಳೆ ಕಾಂಗ್ರೆಸ್ ಮುಖಂಡರು ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ತನಿಖೆ ಮಾಡಲು ರಾಜ್ಯ ಸರಕಾರ ಈಗಾಗಲೇ ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ. ಪಾರ್ವತಮ್ಮ ಸಿದ್ದರಾಮಯ್ಯನವರಿಗೆ ಸೇರಿದ ಕೆಸರೆ ಗ್ರಾಮದ ಸರ್ವೇ ನಂ.464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾದಿಕಾರ ಅಧಿಸೂಚನೆ ಹೊರಡಿಸದೆ ವಶಪಡಿಸಿಕೊಂಡು ಕಾನೂನುಬಾಹಿರವಾಗಿ ಇವರ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಜನರಿಗೆ ಹಂಚಿರುತ್ತಾರೆ ಎಂದು  ಹೇಳಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾನೂನಿನ ಅಡಿಯಲ್ಲಿ 50:50 ಅನುಪಾತದಂತೆ ಪಾರ್ವತಮ್ಮನವರಿಗೆ ಪರ್ಯಾಯವಾಗಿ ನಿವೇಶನಗಳನ್ನು ಪರಿಹಾರ ರೂಪದಲ್ಲಿ ನೀಡಿರುವುದರ ಬಗ್ಗೆ ಮಾಧ್ಯಮಗಳ ಮುಂದೆ ಸುಳ್ಳು ದಾಖಲೆಗಳನ್ನು ಪ್ರದರ್ಶಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣರವರು ಕಳೆದ 20 ದಿನಗಳಿಂದ ನಿರಂತರವಾಗಿ ಸುಳ್ಳುಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಆದುದರಿಂದ ಕೂಡಲೇ ಇವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಿಯೋಗದಲ್ಲಿ ನಗರ ಕಾಂಗ್ರೆಸ್ ಆದ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮ್ಮಣ್, ಕಾನೂನು ಘಟಕದ ಅಧ್ಯಕ್ಷ ತಿಮ್ಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News