ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರ ; ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು!
ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3 ರಂದು ನಡೆಯಲಿದ್ದು, ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದೆ ಎಂದು ಹೇಳಲಾಗಿತ್ತು, ಆದರೆ ಈಗ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯ ಇ.ಸಿ.ನಿಂಗರಾಜೇಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಡ್ಯದ ವಿವೇಕಾನಂದ ಅವರಿಗೆ ಭಿ.ಫಾರಂ ನೀಡಿರುವುದು ಬಿಜೆಪಿ ಪಕ್ಷದಲ್ಲಿ ಅಪಸ್ವರ ಕೇಳಿ ಬಂದಿದೆ.
ಈ ಸಂಬಂಧ ಬಿಜೆಪಿ ಟಿಕೆಟ್ ಆಕಾಂಕ್ಷಿ ಇ.ಸಿ.ನಿಂಗರಾಜೇಗೌಡ ಮಾತನಾಡಿ, "ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿ ಘೋಷಣೆ ಮಾಡಿದರೆ ಮುಗಿಯಿತು. ಬದಲಾಯಿಸುವ ಪ್ರಶ್ನೆಯೇ ಇಲ್ಲ. ನಾನು ನಾಮಪತ್ರ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.
ಇದೀಗ ಜೆಡಿಎಸ್ ವರಿಷ್ಠರ ನಡೆ ಕುರಿತು ಬಿಜೆಪಿ ನಾಯಕರು ಯಾರೂ ಪ್ರತಿಕ್ರಿಯೆ ನೀಡದಿರುವುದು ಮೈತ್ರಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೋಚರಿಸುತ್ತಿದೆ.