ಪ್ರಾಸಿಕ್ಯೂಷನ್‌ಗೆ ಅನುಮತಿ | ಮೈಸೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಪ್ರತಿಭಟನೆ : ಟೈರ್‌ಗೆ ಬೆಂಕಿ, ರಾಜ್ಯಪಾಲರ ಭಾವಚಿತ್ರ ಸುಟ್ಟು ಆಕ್ರೋಶ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಮೈಸೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಶನಿವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ನೇತೃತ್ವವಲ್ಲಿ ಬೀದಿಗಳಿದ ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಜ್ಯಪಾಲರ ಭಾವಚಿತ್ರವನ್ನು ಸುಟ್ಟು ಹಾಕಿ ಟೈರ್ ಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕೆ.ಎಸ್.ಶಿವರಾಮ್ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಹಾಗೂ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಬೆಂಬಲಿಗರು ಬಟ್ಟೆಯನ್ನು ಬಿಚ್ಚಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ನಂತರ ರಾಜ್ಯಪಾಲರ ಭಾವ ಚಿತ್ರವನ್ನು ಸುಟ್ಟು ಹಾಕಿ, ಟೈರ್ ಗೆ ಬೆಂಕಿ ಹಚ್ಚಿದರು. ಈ ವೇಳೆ ಪೊಲೀಸರು ತಡೆಯಲು ಮುಂದಾದಾಗ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದವೇ ಉಂಟಾಯಿತು.
ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರ 40 ವರ್ಷಗಳ ರಾಜಕಾರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ, ಅವರ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಉದ್ದೇಶ ಪೂರ್ವಕವಾಗಿಯೇ ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಕೆ.ಎಸ್.ಶಿವರಾಮ್, ಲೋಕೇಶ್ ಮಾದಾಪುರ, ಡೈರಿ ವೆಂಕಟೇಶ್, ಪ್ರಕಾಶ್, ಮಹೇಶ್, ರಾಜೇಶ್, ಅರವಿಂದ ಸೇರಿದಂತೆ ಹಲವರು ಭಾಗವಹಿಸಿದ್ದರು.