ಲೈಂಗಿಕ ದೌರ್ಜನ್ಯ | ಸೂರಜ್ ರೇವಣ್ಣ ಬಂಧನದಲ್ಲಿ ಯಾವುದೇ ಷಡ್ಯಂತ್ರವಿಲ್ಲ : ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನದಲ್ಲಿ ಯಾವುದೇ ಷಡ್ಯಂತ್ರವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು
ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಲೈಂಗಿಕ ದೌರ್ಜನ್ಯದ ಬಗ್ಗೆ ಸೂರಜ್ ವಿರುದ್ಧ ಯುವಕನೊಬ್ಬ ದೂರು ಕೊಟ್ಟಿದ್ದಾನೆ. ತಪ್ಪು ಯಾರೇ ಮಾಡಿದ್ದರೂ ತಪ್ಪೇ. ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.
ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ :
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಷ್ಟೇ ಕಾರಣ. ಚುನಾವಣೆ ಸಂದರ್ಭದಲ್ಲಿ ಕಡಿಮೆ ಮಾಡಿದರು. ಈಗ ಬೆಲೆ ಏರಿಕೆ ಮಾಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಸಂಬಂಧ ಅಲ್ಲಿನ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ಉಪ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು, ಅಲ್ಲಿನ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.