ಮೈಸೂರು | ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಸಿದ್ದರಾಮಯ್ಯ ಬೆಂಬಲಿಗರ ಸರಣಿ ಪ್ರತಿಭಟನೆ

Update: 2024-08-18 15:01 GMT

ಮೈಸೂರು : ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರು ಮೈಸೂರಿನಲ್ಲಿ ಸರಣಿ ಪ್ರತಿಭಟನೆಗಳನ್ನು ನಡೆಸಿದರು.

ತಾಂಡವಪುರ ಗ್ರಾಮದ ಬಳಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ಸಿದ್ಧರಾಮಯ್ಯ ಬೆಂಬಲಿಗರು ರಾಜ್ಯಪಾಲರು ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು, "ಸಿದ್ಧರಾಮಯ್ಯ ಸರ್ಕಾರ ಅಸ್ಥಿರಗೊಳಿಸಬೇಕು ಎಂದು ಬಿಜೆಪಿ-ಜೆಡಿಎಸ್  ಹುನ್ನಾರ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ಸರ್ಕಾರ ಅಸ್ಥಿರಗೊಳಿಸಲು ಬಿಡುವುದಿಲ್ಲ. ಎಂತಹ ಹೋರಾಟಕ್ಕೆ ನಾವು ಸಿದ್ಧ" ಎಂದು ಎಚ್ಚರಿಕೆ ನೀಡಿದರು.

ಅರ್ಧ ಗಂಟೆಗೂ ಹಚ್ಚು ಸಮಯ ರಸ್ತೆ ತಡೆದಿದ್ದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ನಗರದ ಮೈಸೂರು-ನಂಜನಗೂಡು ರಸ್ತೆ ಬಳಿಯ ರಿಂಗ್ ರಸ್ತೆಯಲ್ಲಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.

ಕೆಲ ಪ್ರತಿಭಟನಾಕಾರರು ರಾಜ್ಯಪಾಲರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮತ್ತೊಂದು ಗುಂಪು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಗೆ ಮುಂದಾಯಿತು. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ನೀರು ಹಾಕಿ ಬೆಂಕಿ ನಂದಿಸಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಸಿಎಂ ಸಿದ್ಧರಾಮಯ್ಯ ಅವರು ತಪ್ಪೇ ಮಾಡಿಲ್ಲ. ಆದರೂ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಬಿಜೆಪಿ-ಜೆಡಿಎಸ್ ಮತ್ತು ನರೇಂದ್ರ ಮೋದಿ, ಅಮಿತ್ ಶಾ ಗೊಂದಲ ಉಂಟುಮಾಡುತ್ತಿದ್ದಾರೆ. ರಾಜ್ಯಪಾಲರ ಮೂಲಕ ಸರ್ಕಾರ ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂಜನಗೂಡು ನಗರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ಧರಾಮಯ್ಯ ಬೆಂಬಲಿಗರು ಹುಲ್ಲಹಳ್ಳಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯಫಾಲರ ಭಾವಚಿತ್ರ ಸುಟ್ಟು ಹಾಕಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲಕ್ಕೆ ನಾವೆಲ್ಲರೂ ಇದ್ದೇವೆ.‌ ದಕ್ಷ ಪ್ರಮಾಣಿಕ ಆಡಳಿತವನ್ನು ಸಹಿಸದ ಕಿಡಿಗೇಡಿ ಬಿಜೆಪಿ-ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ತಿರಗೊಳಿಸಲು ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಆದ್ಯಕ್ಷ ಎಸ್.ಸಿ.ಬಸವರಾಜು, ಹಾಡ್ಯ ರಂಗಸ್ವಾಮಿ, ಶಿವರಾಮ್, ಸಿ.ಟಿ.ಕುಮಾರ್, ಮೈಸೂರು ಬಸವಣ್ಣ, ಸೋಮಶೇಖರ್ ಗೌಡ, ಡೈರಿ ವೆಂಕಟೇಶ್, ಉತ್ತನಹಳ್ಳಿ ಶಿವಣ್ಣ, ನಗರಸಭಾ ಸದಸ್ಯರಾದ ಎಸ್.ಪಿ.ಮಹೇಶ್, ಗಂಗಾಧರ್ , ಸಿ.ಎಂ.ಶಂಕರ್, ಕುರಹಟ್ಟಿ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.


Delete Edit

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News