ಇಂಡಿಯಾ ಮೈತ್ರಿಕೂಟದ ಸಂಸದರಿಂದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ

Update: 2024-07-01 16:37 GMT

PC : PTI 

ಹೊಸದಿಲ್ಲಿ : ಪ್ರತಿಪಕ್ಷದ ನಾಯಕರನ್ನು ಮೌನವಾಗಿರಿಸಲು ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಹಲವು ಸಂಸದರು ಸಂಸತ್ತಿನ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಟಿಎಂಸಿ, ಆಮ್ ಆದ್ಮಿ ಪಕ್ಷದ ನಾಯಕರು ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಸಂಸತ್ತಿನ ಮಕರ ದ್ವಾರಕ್ಕೆ ತೆರಳುವ ಮೆಟ್ಟಿಲಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರತಿಪಕ್ಷಗಳನ್ನು ಮೌನವಾಗಿರಿಸಲು ತನಿಖಾ ಸಂಸ್ಥೆಗಳನ್ನು ಬಳಸುವುದನ್ನು ನಿಲ್ಲಿಸಿ, ಬಿಜೆಪಿ ಸೇರಿ ಹಾಗೂ ಭ್ರಷ್ಟಾಚಾರಕ್ಕೆ ಪರವಾನಿಗೆ ಪಡೆಯಿರಿ ಎಂದು ಪ್ರತಿಪಾದಿಸುವ ಪ್ರದರ್ಶನಾ ಫಲಕಗಳನ್ನು ಪ್ರತಿಪಕ್ಷದ ನಾಯಕರು ಹಿಡಿದುಕೊಂಡಿದ್ದರು.

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಾರಾಗೃಹದ ಕಂಬಿಯ ಹಿಂದೆ ನಿಂತಿರುವ ಭಿತ್ತಿ ಪತ್ರವನ್ನು ಆಮ್ ಆದ್ಮಿ ಪಕ್ಷದ ನಾಯಕ ರಾಘವ ಚಡ್ಡಾ ಹಿಡಿದುಕೊಂಡಿದ್ದರು.

ಪಶ್ಚಿಮಬಂಗಾಳದಲ್ಲಿ ಬಂಧಿಸಲಾದ ಮೂವರು ಸಚಿವರನ್ನು ಬಿಡುಗಡೆ ಮಾಡುವಂತೆ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಪಕ್ಷದ ಸಂಸದರು ಘೋಷಣೆಗಳನ್ನು ಕೂಗಿದರು.

ಪ್ರತಿಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ಇಂಡಿಯಾ ಮೈತ್ರಿಕೂಟ ಸಂಘಟಿತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News