ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕನ ಮೇಲೆ ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು
ಪುಣೆ : ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರು ಎಸ್ಸಿ/ಎಸ್ಟಿ ಕಾಯ್ದೆಯಡಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಹಿಳೆಯ ಮೇಲೆ ಎಸ್ಸಿ/ಎಸ್ಟಿ ಕಾಯ್ದೆಯಡಿ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಿವಸೇನೆ ಮುಖಂಡನ ಮೇಲೆ ಥಾಣೆ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿಯೇ ಗುಂಡು ಹಾರಿಸಿದ ಆರೋಪದ ಮೇಲೆ ಶಾಸಕ ಗಣಪತ್ ಗಾಯಕ್ವಾಡ್, ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜನವರಿ 31 ರಂದು ಗಾಯಕ್ವಾಡ್ ಅವರು ಮಹಿಳೆ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಶನಿವಾರದಂದು ದ್ವಾರಲಿ ಗ್ರಾಮದ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಗಣಪತ್ ಗಾಯಕ್ವಾಡ್ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿಲ್ ಲೈನ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮೀನಿನ ಮಾಲಕಿಯೂ ಆಗಿರುವ ಮಹಿಳೆಯ ಆರೋಪದ ಮೇರೆಗೆ ಶಾಸಕರ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಹಿಲ್ ಲೈನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.