ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ AAP ಆರೋಪಿ
ಹೊಸ ದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಶುಕ್ರವಾರ ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.
ಇಂದು ಬೆಳಗ್ಗೆ, ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಆಪ್ ಪಕ್ಷವನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಸುಪ್ರೀಂ ಕೋರ್ಟ್ ಗೆ ತಿಳಿಸಿದರು. ತಮ್ಮ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಅವರು ತಿಳಿಸಿದರು.
2021-22ರಲ್ಲಿ ದಿಲ್ಲಿ ಸರಕಾರವು ರೂಪಿಸಿ, ಜಾರಿಗೆ ತಂದಿದ್ದ ಹಾಗೂ ನಂತರ ಹಿಂಪಡೆಯಲಾಗಿದ್ದ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಕುರಿತು ಈ ಪ್ರಕರಣ ನಡೆಯುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ ಹಾಗೂ ಜಾರಿ ನಿರ್ದೇಶನಾಲಯದ ಪ್ರಕಾರ, ಅಬಕಾರಿ ನೀತಿಯನ್ನು ಪರಿಷ್ಕರಿಸುವಾಗ ಅಕ್ರಮಗಳನ್ನು ನಡೆಸಲಾಗಿದೆ ಹಾಗೂ ಪರವಾನಗಿದಾರರಿಗೆ ಅನಪೇಕ್ಷಿತ ಸಹಾಯವನ್ನು ವಿಸ್ತರಿಸಲಾಗಿದೆ ಎಂದು ಆರೋಪಿಸಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಈವರೆಗೆ ಏಳು ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್, ಆಪ್ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, BRS ನಾಯಕಿ ಕೆ.ಕವಿತಾ ಹಾಗೂ ದಿಲ್ಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 18 ಮಂದಿಯನ್ನು ಬಂಧಿಸಿದೆ.
ಮೇ 10ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂಟತರ ಜಾಮೀನು ಮಂಜೂರು ಮಾಡಿತ್ತು.