ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಸತ್ಯಾಗ್ರಹ: ಪೊಲೀಸರ ಮೇಲೆ ಕಲ್ಲು ತೂರಾಟ
ಮುಂಬೈ: ಮರಾಠ ಮೀಸಲಾತಿಗಾಗಿ ಆಗ್ರಹಿಸಿ ಮಹಾರಾಷ್ಟ್ರದ ಜಲ್ನಾದಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕೆಲವು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟಗಾರ ಮನೋಜ್ ಜಾರಂಗೆ ನೇತೃತ್ವದಲ್ಲಿ ಜಲ್ನಾದ ಅಂತರವಾಲಿ ಸಾರಥಿ ಗ್ರಾಮದಲ್ಲಿ ಮಂಗಳವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಜಾರಂಜ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಪ್ರಯತ್ನಿಸಿದಾಗ ಘರ್ಷಣೆ ಪ್ರಾರಂಭವಾಗಿದೆ.
ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದು, ಹಲವು ಪೊಲೀಸರಿಗೆ ಗಾಯಗಳಾಗಿವೆ. ಕೆಲವರು ರಾಜ್ಯ ಸಾರಿಗೆ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಅಲ್ಲದೆ, ಗಾಳಿಯಲ್ಲಿ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ ಸ್ಥಳದಲ್ಲಿದ್ದವರು ಹೇಳಿದ್ದಾರೆ. ಆದರೆ, ಆ ಬಗ್ಗೆ ಅಧಿಕಾರಿಗಳು ಖಚಿತ ಮಾಹಿತಿಯನ್ನು ನೀಡಿಲ್ಲ.
ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸರು 300 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಾಂತಿಗಾಗಿ ಮನವಿ ಮಾಡಿದ್ದು, ಹಿಂಸಾಚಾರದ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ.
ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
‘ಸಮುದಾಯಕ್ಕೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ, ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯ ಸರ್ಕಾರ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿದೆ’ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಲಹೆ ಸೂಚನೆಗಳಿದ್ದಲ್ಲಿ ಸ್ವಾಗತಿಸುತ್ತೇವೆ, ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಿರುವುದನ್ನು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಖಂಡಿಸಿವೆ. ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಇಂದು ಸಂಜೆ ಹಿಂಸಾಚಾರ ಪೀಡಿತ ಗ್ರಾಮಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.