ಇಂದು 370ನೇ ವಿಧಿ ರದ್ದತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು: ಕಾಶ್ಮೀರ ನಾಯಕರಿಗೆ ಗೃಹ ಬಂಧನ

Update: 2023-12-11 05:34 GMT

ಮೆಹಬೂಬಾ ಮುಫ್ತಿ (PTI)

ಶ್ರೀನಗರ: ವಿಧಿ 370ರ ಅಡಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಆಗಸ್ಟ್ 2019ರಲ್ಲಿ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ನಿರ್ಧಾರದ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದು, ಹಲವಾರು ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಿದ್ದಾರೆ ಎಂದು indianexpress.com ವರದಿ ಮಾಡಿದೆ.

16 ದಿನಗಳ ಕಾಲ ಅರ್ಜಿದಾರರು, ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಆಡಳಿತದ ವಾದಗಳನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐದು ಮಂದಿ ಸದಸ್ಯರ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 5ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಕೇಂದ್ರ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಕೈಗೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ಸಾಂವಿಧಾನಿಕ ಪೀಠವು ಪೂರ್ಣಗೊಳಿಸಿದೆ.

ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಸೇರಿದಂತೆ ಹಲವಾರು ಹಿರಿಯ ರಾಜಕೀಯ ನಾಯಕರನ್ನು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ. ಹುರಿಯತ್ ಅಧ್ಯಕ್ಷ ಮಿರಾವೈಝ್ ಉಮರ್ ಫಾರೂಖ್ ಅವರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ,

ಜಮ್ಮು ಮತ್ತು ಕಾಶ್ಮೀರ ಆಡಳಿತವು ಶ್ರೀನಗರದಾದ್ಯಂತ ಕರ್ತವ್ಯನಿರತ ಮ್ಯಾಜಿಸ್ಟ್ರೇಟರ್ ಗಳು ಹಾಗೂ ಮೇಲ್ವಿಚಾರಕರನ್ನು ನೇಮಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುವಂತೆ ಅವರಿಗೆ ಸೂಚಿಸಿದೆ.

ಇದಕ್ಕೂ ಮುನ್ನ, ಸೋಮವಾರದಂದು ಪ್ರಕಟವಾಗಲಿರುವ ವಿಧಿ 370ರ ತೀರ್ಪಿಗೂ ಮುನ್ನವೇ ಕೇಂದ್ರ ಸರ್ಕಾರ ತಮ್ಮ ಮೇಲೆ ದಾಳಿ ನಡೆಸಬಹುದು ಎಂದು ಕಾಶ್ಮೀರ ರಾಜಕೀಯ ನಾಯಕರು ಶಂಕೆ ವ್ಯಕ್ತಪಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News