ಅರುಣಾಚಲ ಪ್ರದೇಶದಲ್ಲಿ ಸತತ ಮೂರನೇ ಬಾರಿ ಅಧಿಕಾರಕ್ಕೇರಿದ ಬಿಜೆಪಿ; ಸಿಕ್ಕಿಂನಲ್ಲಿ ಎಸ್‌ಕೆಎಂ ಜಯಭೇರಿ

Update: 2024-06-02 10:39 GMT

PC: X

ಹೊಸದಿಲ್ಲಿ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸತತ ಮೂರನೇ ಗೆಲುವು ದಾಖಲಿಸಿ, 44 ಸ್ಥಾನಗಳನ್ನು ಪಡೆದುಕೊಂಡು ಇತರ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸಿಕ್ಕಿಂನಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದುಕೊಂಡಿದ್ದು, ಇತರ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದುಕೊಂಡಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಇಪಿ) ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಎರಡು ಸ್ಥಾನಗಳನ್ನು ಗೆದ್ದಿದ್ದರೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಎರಡು ಸ್ಥಾನಗಳನ್ನು ಪಡೆದುಕೊಂಡು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಸಿಐ ಅಂಕಿಅಂಶಗಳ ಪ್ರಕಾರ ಸ್ವತಂತ್ರ ಅಭ್ಯರ್ಥಿಗಳು ಮೂರು ಸ್ಥಾನಗಳನ್ನು ಗೆದ್ದಿದ್ದಾರೆ.

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಪೇಮಾ ಖಂಡು ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಅವಧಿಗೆ ಜಯಭೇರಿ ಬಾರಿಸುತ್ತಿದ್ದಂತೆ ಸಂಭ್ರಮಾಚರಣೆ ಶುರುವಾಗಿದೆ. ಸಿಕ್ಕಿಂನಲ್ಲಿ ಎಸ್‌ಕೆಎಂ ಕಾರ್ಯಕರ್ತರು ಕೂಡಾ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಎಪ್ರಿಲ್ 19 ರಂದು ಮತದಾನವಾಗಿದ್ದು, ಸಿಕ್ಕಿಂನಲ್ಲಿ ಒಟ್ಟು 79.88 ರಷ್ಟು ಮತದಾನವಾಗಿದ್ದರೆ ಅರುಣಾಚಲ ಪ್ರದೇಶದಲ್ಲಿ 82.95 ರಷ್ಟು ಮತದಾನವಾಗಿದೆ.

60 ಸದಸ್ಯ ಬಲದ ಅರುಣಾಚಲ ವಿಧಾನಸಭೆಗೆ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಮುಖ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿ ಎಲ್ಲ 60 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ 19 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News