ಪಶ್ಚಿಮ ಬಂಗಾಳ ಹಿಂಸಾಚಾರ : ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನಿಯೋಜನೆಗೆ ಕಲ್ಕತ್ತಾ ಹೈಕೋರ್ಟ್ ಸೂಚನೆ

ಕೋಲ್ಕತ್ತಾ : ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಬಳಿಕ ಮುರ್ಷಿದಾಬಾದ್‌ನಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ನೀಡಿದೆ.
ನ್ಯಾಯಮೂರ್ತಿಗಳಾದ ಸೌಮೆನ್ ಸೇನ್ ಮತ್ತು ರಾಜಾ ಬಸು ಚೌಧರಿ ಅವರ ಪೀಠ, ʼರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳು ಸಮರ್ಪಕವಾಗಿಲ್ಲ. ಗಲಭೆಕೋರರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಣ್ಣು ಮುಚ್ಚಿ ಕೂತಿರಲು ಸಾಧ್ಯವಿಲ್ಲ. ನಾಗರಿಕರಿಗೆ ಸೂಕ್ತ ಭದ್ರತೆ ಮತ್ತು ರಕ್ಷಣೆ ನೀಡಬೇಕಾದ್ದು ಸರಕಾರದ ಕರ್ತವ್ಯ. ಈ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದೆ.
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಹಿಂಸಾಚಾರವನ್ನು ತಡೆಯಲು ಕೇಂದ್ರ ಸಶಸ್ತ್ರ ಪಡೆಗಳ ನಿಯೋಜನೆಗೆ ಆಗ್ರಹಿಸಿತ್ತು.
ಅರ್ಜಿಯು ರಾಜಕೀಯ ಪ್ರೇರಿತ ಅರ್ಜಿ ಎಂದು ವಾದಿಸಿದ ರಾಜ್ಯ ಸರಕಾರ, ಹಿಂಸಾಚಾರವನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ 138ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ.