ಮಣಿಪುರದ ಕುರಿತು ಪ್ರಧಾನಿ ಮೋದಿ ಮೌನಕ್ಕೆ ಕಾಂಗ್ರೆಸ್ ತರಾಟೆ

Update: 2023-12-05 14:43 GMT

Photo: PTI

ಹೊಸದಿಲ್ಲಿ: ಮಣಿಪುರ ಹಿಂಸಾಚಾರದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಮಣಿಪುರದಲ್ಲಿ ಪರಿಸ್ಥಿತಿ ಈಗಲೂ ಸಹಜ ಸ್ಥಿತಿಗೆ ಮರಳಿಲ್ಲ ಎಂದು ಹೇಳಿದೆ. ಅಲ್ಲದೆ, ಸರ್ವ ಸಮ್ಮತ ಪರಿಹಾರ ಕಂಡುಕೊಳ್ಳಲು ಚರ್ಚೆ ಆಯೋಜಿಸುವಂತೆ ಪ್ರಧಾನಿ ಅವರನ್ನು ಆಗ್ರಹಿಸಿದೆ.

ಮಣಿಪುರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದಶಿ ಜೈರಾಮ್ ರಮೇಶ್ ಅವರು ಕೂಡ ಪ್ರಶ್ನಿಸಿದ್ದಾರೆ. ಮಣಿಪುರದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವರು ಪ್ರತಿಪಾದಿಸಿದ ಹೊರತಾಗಿಯೂ ಅಲ್ಲಿನ ವಾಸ್ತವ ಸ್ಥಿತಿ ಭಿನ್ನವಾಗಿದೆ ಎಂದು ಅವರು ಹೇಳಿದ್ದಾರೆ.

ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರವನ್ನು ಟೀಕಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಣಿಪುರದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸಂಪೂರ್ಣವಾಗಿ ನಾಶವಾಗಲು ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ.

ಮಣಿಪುರದಲ್ಲಿ ಶಾಂತಿ, ಸಾಮರಸ್ಯ ಹಾಗೂ ಸಹಜ ಸ್ಥಿತಿಯನ್ನು ಮರು ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ರೂಪಿಸಿದ ಶಾಂತಿ ಸಮಿತಿ ಕಣ್ಣಿಗೆ ಕಾಣುವ ಯಾವುದೇ ಕೆಲಸವನ್ನು ಮಾಡಿಲ್ಲ ಯಾಕೆ? ಎಂದು ಕೂಡ ಖರ್ಗೆ ಅವರು ‘ಎಕ್ಸ್’ನಲ್ಲಿ ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News