ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್
ಮುಂಬೈ: ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ ಅಶೋಕ್ ಚವಾಣ್ ಸೋಮವಾರ ಕಾಂಗ್ರೆಸ್ ಪಕ್ಷಕ್ಜೆ ರಾಜಿನಾಮೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾನಾ ಪಟೋಲೆಗೆ ರಾಜಿನಾಮೆ ಪತ್ರ ರವಾನಿಸಿರುವ ಅಶೋಕ್ ಚೌಹಾಣ್, "ಫೆಬ್ರವರಿ 12, 2024ರ ಮಧ್ಯಾಹ್ನದಿಂದ ಅನ್ವಯವಾಗುವಂತೆ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.
65 ವರ್ಷ ವಯಸ್ಸಿನ ಅಶೋಕ್ ಚೌಹಾಣ್ ಈ ಪತ್ರದೊಂದಿಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜಿನಾಮೆ ಸಲ್ಲಿಸಿದ್ದು, ರಾಜಿನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷರಿಗೆ ರವಾನಿಸಿದ್ದಾರೆ.
ಮಹಾರಾಷ್ಟ್ರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಿಲಿಂದ್ ದಿಯೊರಾ ಹಾಗೂ ಬಾಬಾ ಸಿದ್ದೀಕಿ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.
ಅಶೋಕ್ ಚವಾಣ್ r ಮುಂದಿನ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, "ಮುಂದೇನಾಗುತ್ತದೆಂದು ಕಾದು ನೋಡಿ" ಎಂದು ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
2008ರಿಂದ 2010ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಅವರನ್ನು ಮಹಾರಾಷ್ಟ್ರದ ಪ್ರಭಾವಿ ಕಾಂಗ್ರೆಸ್ ನಾಯಕ ಎಂದು ಪರಿಗಣಿಸಲಾಗಿತ್ತು. ಅವರು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಶಂಕರ್ ರಾವ್ ಚವಾಣ್ ರ ಪುತ್ರರಾಗಿದ್ದಾರೆ.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಅವರು ಪಕ್ಷದಲ್ಲಿ ಹೊಂದಿದ್ದರು.