ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭಾರೀ ಮಳೆ; ದುರಂತಗಳಲ್ಲಿ ಕನಿಷ್ಠ 50 ಮಂದಿ ಮೃತ್ಯು

ಸಾಂದರ್ಭಿಕ ಚಿತ್ರ | PC : PTI
ಹೊಸದಿಲ್ಲಿ: ಉತ್ತರಪ್ರದೇಶ, ಬಿಹಾರ ಹಾಗೂ ಉತ್ತರಾಖಂಡದಲ್ಲಿ ಗುರುವಾರ ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಭಾರೀ ಮಳೆಯಿಂದ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ.
ಬಿಹಾರದಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ 13 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಸುಂಖರಿ ಕಲಾನ್ ಗ್ರಾಮದಲ್ಲಿ ಸಿಡಿಲು ಬಡಿದು 40 ವರ್ಷದ ರೈತರೋರ್ವರು ಮೃತಪಟ್ಟಿದ್ದಾರೆ.
ಬಿಹಾರದ ನಲಂದ ಜಿಲ್ಲೆಯೊಂದರಲ್ಲೇ 20 ಮಂದಿ ಸಾವನ್ನಪ್ಪಿದ್ದಾರೆ. ಸಿವಾನ್ನಲ್ಲಿ ಇಬ್ಬರು ಹಾಗೂ ಕಟಿಹಾರ್, ದರ್ಬಾಂಗ್, ಬೇಗುಸರಾಯ್, ಬಾಗಲ್ಪುರ ಹಾಗೂ ಜಹಾನಾಬಾದ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಭಾರೀ ಮಳೆಯಿಂದ ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ. ನಾಲ್ಕು ಜಿಲ್ಲೆಗಳಲ್ಲಿ ಬುಧವಾರ ಸಿಡಿಲು ಬಡಿದು 13 ಮಂದಿ ಸಾವನ್ನಪ್ಪಿದ್ದಾರೆ.
ತೀವ್ರವಾದ ಸಂವಹನ ವ್ಯವಸ್ಥೆ (ಸಿಡಿಲಿನಂತಹ) ಪಶ್ಚಿಮ ಬಿಹಾರದಿಂದ ಪೂರ್ವ ಬಿಹಾರಕ್ಕೆ ಬಹಳ ವೇಗವಾಗಿ ಚಲಿಸುತ್ತಿದೆ ಎಂದು ಮುನ್ನೆಚ್ಚರಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಸಂಜೆ 6.13ರ ವರೆಗೆ ಮನೆಯ ಒಳಗೇ ಇರುವಂತೆ ವಿಪತ್ತು ನಿರ್ವಹಣಾ ಇಲಾಖೆ ಜನರಿಗೆ ಸಲಹೆ ನೀಡಿದ ಬಳಿಕವೂ ಗುರುವಾರ ಸಾವು ಸಂಭವಿಸಿರುವುದು ವರದಿಯಾಗಿದೆ.
ಪ್ರತಿಕೂಲ ಹವಾಮಾನ ರಾಜ್ಯದಲ್ಲಿ ವಿದ್ಯುತ್ ಮೂಲ ಸೌಕರ್ಯಕ್ಕೆ ವ್ಯಾಪಕ ಹಾನಿ ಉಂಟು ಮಾಡಿದೆ, 320 ವಿದ್ಯುತ್ ಕಂಬಗಳನ್ನು ಉರುಳಿಸಿದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ಘೋಷಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಹಾರದ ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗೂ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಉತ್ತರಪ್ರದೇಶದ 36 ಜಿಲ್ಲೆಗಳಲ್ಲಿ ಭಾರೀ ಮಳೆ ಮಳೆಯಾಗಿದ್ದು, ಮುಖ್ಯಮಂತ್ರಿ ಆದಿತ್ಯನಾಥ್ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಮರ್ಪಕ ರೀತಿಯಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಹಾಗೂ ಬೆಳೆ, ಜಾನುವಾರು ಹಾನಿಯನ್ನು ಅಂದಾಜಿಸುವಂತೆ ಹಾಗೂ ಸಂತ್ರಸ್ತ ರೈತರಿಗೆ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.