ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಿರುವ ಚುನಾವಣಾ ಆಯೋಗ
ಹೊಸದಿಲ್ಲಿ : ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಅಕ್ಟೋಬರ್ 15 ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪ್ರಕಟಿಸಲಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ.
ಜಾರ್ಖಂಡ್‌ನಲ್ಲಿ, ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಸ್ಪರ್ಧಿಸಲಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಕೇಂದ್ರ ಚುನಾವಣಾ ಸಮಿತಿಯಿಂದ (CEC) ಅನುಮತಿ ಪಡೆದ ನಂತರ ಮುಂದಿನ ಎರಡು ದಿನಗಳಲ್ಲಿ ಮಹಾರಾಷ್ಟ್ರ ಚುನಾವಣೆಗೆ 60 ಕ್ಕೂ ಹೆಚ್ಚು ಅಭ್ಯರ್ಥಿಗಳ ತನ್ನ ಮೊದಲ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ನವದೆಹಲಿಯಲ್ಲಿ ಪಕ್ಷದ ಮಹಾರಾಷ್ಟ್ರ ಘಟಕದ ಪ್ರಮುಖ ನಾಯಕರು ಮತ್ತು ಎರಡು ರಾಜ್ಯ ಚುನಾವಣಾ ಉಸ್ತುವಾರಿಗಳಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಸರಣಿ ಸಭೆ ನಡೆಸಿದರು.
ಪಕ್ಷದ ಮಹಾರಾಷ್ಟ್ರ ಘಟಕವು ಸಿಇಸಿಗೆ ಆಯ್ಕೆ ಮಾಡಲು ಹಾಲಿ ಶಾಸಕರು ಸೇರಿದಂತೆ ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಈ ಮಧ್ಯೆ , ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸಭೆಯನ್ನು ಕರೆದಿದೆ.