ಮಹಾರಾಷ್ಟ್ರ: ಕೋಮು ಘರ್ಷಣೆಯಲ್ಲಿ ಓರ್ವ ಸಾವು, ಮೂವರಿಗೆ ಗಾಯ
ಮುಂಬೈ:ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಲ್ಲಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಖಟವ್ ತಾಲೂಕಿನಲ್ಲಿ ರವಿವಾರ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಓರ್ವ ಮೃತಪಟ್ಟಿದ್ದಾರೆ ಹಾಗೂ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ಸತಾರಾದ ಹಿರಿಯ ಪೊಲೀಸ್ ಅಧಿಕಾರಿ ದೃಢಪಡಿಸಿದ್ದಾರೆ.
‘‘ಇನ್ನು ಕೆಲವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ’’ ಎಂದು ಅವರು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ವಲಯದಲ್ಲಿ ಇಂಟರ್ನೆಟ್ ಸೇವೆಯನ್ನು ಸತಾರಾ ಜಿಲ್ಲಾಡಳಿತ ರದ್ದುಗೊಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪುಣೆಯಿಂದ 160 ಕಿ.ಮೀ. ಹಾಗೂ ಸತಾರಾ ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಪುಸೆಸಾವಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ಪ್ರದೇಶದ ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಪೋಸ್ಟ್ ಗಳು ರವಿವಾರ ರಾತ್ರಿ ಸುಮಾರು 9.30ಕ್ಕೆ ಘರ್ಷಣೆ ಆರಂಭವಾಗಲು ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ.
ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಸತಾರಾ ಜಿಲ್ಲಾ ಪೊಲೀಸ್ ನ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ‘‘ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಹಾಗೂ ಪರಿಸ್ಥಿತಿ ಕುರಿತು ನಿರಂತರ ನಿಗಾ ವಹಿಸಲಾಗುತ್ತಿದೆ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಿದ್ದೇವೆ’’ ಎಂದು ಅವರು ತಿಳಿಸಿದ್ದಾರೆ. ಹಿಂಸಾಚಾರದಲ್ಲಿ ತೊಡಗದಂತೆ ಜನರಲ್ಲಿ ಮನವಿ ಮಾಡುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದ ಹ್ಯಾಂಡಲ್ ನಲ್ಲಿ ಜಿಲ್ಲಾಡಳಿತ ಅಪ್ಲೋಡ್ ಮಾಡಿದ್ದಾರೆ.