ʼಒಂದು ರಾಷ್ಟ್ರ, ಒಂದು ಚುನಾವಣೆʼ: ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಹೊಸದಿಲ್ಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ʼಒಂದು ರಾಷ್ಟ್ರ, ಒಂದು ಚುನಾವಣೆʼ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಇಂದು ಕೇಂದ್ರ ಸಚಿವ ಸಂಪುಟದ ಮುಂದಿಡಲಾಗಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಯನ್ನು ಒಂದೇ ವೇಳಾಪಟ್ಟಿಗೆ ನಡೆಸುವ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಗೆ ಮೋದಿ ಸಂಪುಟ ಅನುಮೋದನೆ ನೀಡಿದೆ.
ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಅಂದರೆ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ವರದಿ ಸಲ್ಲಿಸಿತ್ತು.
ಉನ್ನತ ಮಟ್ಟದ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿದೆ. ಸಮಿತಿ ಮಾಡಿದ ಶಿಫಾರಸ್ಸುಗಳ ಅನುಷ್ಠಾನವನ್ನು ಪರಿಶೀಲಿಸಲು ʼಅನುಷ್ಠಾನ ಸಮಿತಿʼ ಸ್ಥಾಪಿಸುವಂತೆಯೂ ವರದಿಯಲ್ಲಿ ಆಗ್ರಹಿಸಲಾಗಿದೆ.
ಏಕಕಾಲಿಕ ಚುನಾವಣೆಗಳು ಸಂಪನ್ಮೂಲಗಳನ್ನು ಉಳಿಸಲು ಸಹಾಯ ಮಾಡುತ್ತದೆ, ಅಭಿವೃದ್ಧಿ ಮತ್ತು ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುತ್ತದೆ, ಭಾರತದ ಆಶಯಗಳನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ ಎಂದು ಸಮಿತಿ ಹೇಳಿದೆ.
ರಾಜ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಸಾಮಾನ್ಯ ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಸಿದ್ಧಪಡಿಸುವಂತೆ ಸಮಿತಿಯು ಶಿಫಾರಸು ಮಾಡಿದೆ.
ಪ್ರಸ್ತುತ, ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯ ಜವಾಬ್ಧಾರಿ ಹೊಂದಿದೆ. ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗವು ನಡೆಸುತ್ತದೆ.
ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ಸಿದ್ದಪಡಿಸಿದ ಈ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ.