ತಿರುಪತಿ ಲಡ್ಡು ವಿವಾದ | ಎಸ್‌ಐಟಿ ತನಿಖೆಗೆ ಆದೇಶ ನೀಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

Update: 2024-09-22 16:23 GMT

 ಚಂದ್ರಬಾಬು ನಾಯ್ಡು | PTI

ಅಮರಾವತಿ : ತಿರುಪತಿ ಪ್ರಸಾದದಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ಆರೋಪದ ವಿವಾದದ ನಡುವೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಈ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಆದೇಶಿಸಿದ್ದಾರೆ.

ರವಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಮತ್ತು ಅದಕ್ಕಿಂತ ಹೆಚ್ಚಿನ ಶ್ರೇಣಿಯ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

"ನಾವು ಐಜಿಪಿ ಮತ್ತು ಮೇಲಿನ ಹುದ್ದೆಗಳ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುತ್ತಿದ್ದೇವೆ. ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ. ಆ ವರದಿಯನ್ನು ಆಧರಿಸಿ ನಾವು ಅಂತಹ ವಿಷಯಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ" ಎಂದು ನಾಯ್ಡು ಹೇಳಿದ್ದಾರೆ ಎಂದು ANI ಸುದ್ದಿ ಸಂಸ್ಥೆ ತಿಳಿಸಿದೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಾಯ್ಡು, ಜಗನ್ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. “ಜಗನ್ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ 100 ದಿನ ಕೂಡ ಆಗಿಲ್ಲ. ನೀವು ನೀತಿಗಳನ್ನು ಹೇಳುತ್ತೀರಿ, ನನ್ನ ನೀತಿಯನ್ನು ಟೀಕಿಸುತ್ತೀರಿ. ನೀವು ಏನು ಮಾಡಿದ್ದೀರಿ, ನಾನು ಏನು ಮಾಡಿದ್ದೇನೆ ಎಂಬುದನ್ನು ನಾನು ಉತ್ತರಿಸುತ್ತೇನೆ. ಆದರೆ, ನೀವು ದಿಕ್ಕು ತಪ್ಪಿಸಲು ಬಯಸಿದ್ದೀರಿ. ಆದರೆ ನೀವು ಹಾಗೆ ಮಾಡಿದರೆ, ಹೆಚ್ಚು ಹೆಚ್ಚು ಭಾವನೆಗಳಿಗೆ ಧಕ್ಕೆಯಾಗುತ್ತದೆ, ”ಎಂದು ನಾಯ್ಡು ಟೀಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News