ಪಶ್ಚಿಮ ಬಂಗಾಳ | ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ : ಕನಿಷ್ಠ ಮೂವರು ಮೃತ್ಯು

Photo | PTI
ಪಶ್ಚಿಮ ಬಂಗಾಳ : ಮುರ್ಷಿದಾಬಾದ್ ಜಿಲ್ಲೆಯ ಸಮ್ಸೇರ್‌ಗಂಜ್‌ನಲ್ಲಿ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆದಿದೆ. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದಲ್ಲದೆ ರೈಲು ಸಂಚಾರಕ್ಕೆ ಅಡ್ಡಿಪಡಿಸಿದರು. ಪ್ರತಿಭಟನಾಕಾರರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪವನ್ನು ಪಡೆದುಕೊಂಡಿದೆ. ಈ ವೇಳೆ 10 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯುಗಳನ್ನು ಬಳಸಿದ್ದಾರೆ.
ಹಿಂಸಾಚಾರ ಪೀಡಿತ ಸಮ್ಸೇರ್‌ಗಂಜ್ ಪ್ರದೇಶದ ಜಾಫ್ರಾಬಾದ್‌ನಲ್ಲಿ ಮನೆಯೊಂದನ್ನು ಲೂಟಿ ಮಾಡಿದ್ದಲ್ಲದೆ ಇಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಮ್ಸೇರ್‌ಗಂಜ್‌ನ ಧುಲಿಯನ್‌ನಲ್ಲಿ ಮತ್ತೋರ್ವ ವ್ಯಕ್ತಿ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಹಿಂಸಾಚಾರಕ್ಕೆ ಸಂಬಂಧಿಸಿ 118 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.