ಲಕ್ಷ್ಮಣ್ ‘ಕೈ’ ಹಿಡಿಯಲಿದ್ದಾರೆಯೇ ಒಕ್ಕಲಿಗರು?

Update: 2024-03-23 05:51 GMT

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಕ್ತಾರ ಎಂ.ಲಕ್ಷ್ಮಣ್ ಕಣಕ್ಕಿಳಿಯಲಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಎದುರಿಸಲಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಒಟ್ಟು 14 ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದರು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಎಂ.ಲಕ್ಷ್ಮಣ್ ಅವರಿಗೆ ಮಣೆ ಹಾಕಿದೆ.

ಮೈಸೂರು ಕ್ಷೇತ್ರದ ಪುನರ್‌ವಿಂಗಡಣೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಒಕ್ಕಲಿಗ ಗೌಡ ಅಭ್ಯರ್ಥಿಗೆ ಮಣೆ ಹಾಕಿದೆ. 2009ರಿಂದ 2019ರವರೆಗೆ ಕಾಂಗ್ರೆಸ್ ಕುರುಬ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಕ್ಷೇತ್ರದಲ್ಲಿ 7 ಲಕ್ಷಕ್ಕೂ ಅಧಿಕ ಒಕ್ಕಲಿಗ ಗೌಡ ಜನಾಂಗದ ಮತದಾರರು ಇದ್ದು, ಒಕ್ಕಲಿಗ ಜನಾಂಗದ ಪ್ರತಾಪ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವುದರಿಂದ ಈ ಬಾರಿ ಒಕ್ಕಲಿಗರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಕೈ ಹಿಡಿಯುವ ಲೆಕ್ಕಾಚಾರದಲ್ಲಿ ಕೈ ಪಾಳಯ ಇದೆ.

ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಸುದ್ದಿಗೋಷ್ಠಿಯ ಮೂಲಕ ಸದಾ ಸುದ್ದಿಯಲ್ಲಿರುವ ನಾಯಕ. ಸುದ್ದಿಗೋಷ್ಠಿಯನ್ನು ನಡೆಸಿ ಲಕ್ಷ್ಮಣ್ ಅವರು ವಿರೋಧ ಪಕ್ಷಕ್ಕೆ ದುಃಸ್ವಪ್ನವಾಗಿ ಕಾಡುತ್ತಿದ್ದರು. ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ನಡೆಸುವ ವಾಗ್ದಾಳಿ,ಆರೋಪಗಳನ್ನು ಲಕ್ಷ್ಮಣ್ ಅವರು ಸುದ್ದಿಗೋಷ್ಠಿ ನಡೆಸಿ ಸಮರ್ಥವಾದ ಉತ್ತರ ನೀಡುತ್ತಿದ್ದರು.

ಅದಲ್ಲದೇ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಕೋವಿಡ್ ಹಗರಣ ದಾಖಲೆಗಳನ್ನು ಬಹಿರಂಗಪಡಿಸಿ ಸುದ್ದಿಯಲ್ಲಿದ್ದರು. ಬಿಜೆಪಿ ವಿರುದ್ಧ ನಿರಂತರವಾಗಿ ಪ್ರೆಸ್‌ಮೀಟ್ ನಡೆಸಿ ವಾಗ್ದಾಳಿ ನಡೆಸುತ್ತಿದ್ದರು. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಯಾವುದೇ ಹೇಳಿಕೆ ಕೊಟ್ಟರೂ ಲಕ್ಷ್ಮಣ್ ಅವರು ತಮ್ಮದೇ ದಾಟಿಯಲ್ಲಿ ಉತ್ತರ ನೀಡುತ್ತಿದ್ದರು.

ಕ್ಷೇತ್ರದ ಹಾಲಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ ಸುದ್ದಿಗೋಷ್ಠಿ ನಡೆಸಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಲಕ್ಷ್ಮಣ್ ಅವರು ತಮ್ಮ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಪ್ರತಾಪ ಸಿಂಹ ಅವರು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು. ಅಷ್ಟರ ಮಟ್ಟಿಗೆ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಾಲಿಗೆ ದುಃಸ್ವಪ್ನವಾಗಿದ್ದರು.

ಕೊಡಗಿನೊಂದಿಗೆ ನಿಕಟ ಸಂಪರ್ಕ:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮೈಸೂರು ಜಿಲ್ಲೆಯವರು.ಆದರೆ ಕೊಡಗು ಜಿಲ್ಲೆಯೊಂದಿಗೆ ನಿಕಟವಾದ ಸಂಪರ್ಕ ಹೊಂದಿದ್ದಾರೆ.ಕಾಂಗ್ರೆಸ್ ಶಾಸಕದ್ವಯರು ಮತ್ತು ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.ಅದಲ್ಲದೇ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಮುಂದಿದ್ದರು. ಕೊಡಗು ಜಿಲ್ಲೆಯ ರಾಜಕೀಯದ ಬಗ್ಗೆ ಸ್ಪಷ್ಟವಾದ ಅರಿವಿರುವ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಕೊಡಗು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಯಾವುದೇ ತೊಡಕಾಗುವುದಿಲ್ಲ ಎಂಬ ಲೆಕ್ಕಾಚಾರಗಳಿವೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಐದು ಮಂದಿ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಲಾಭ ಆಗುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೆ. ಅದಲ್ಲದೇ ಅಹಿಂದ ಮತಗಳೊಂದಿಗೆ ಒಕ್ಕಲಿಗ ಮತಗಳು ಕೈ ಹಿಡಿದರೆ ಗೆಲುವು ಸುಲಭ ಪಡೆಯಬಹುದೆಂಬುದು ಕಾಂಗ್ರೆಸ್‌ನ ಲೆಕ್ಕಾಚಾರವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ಕೆ.ಎಂ. ಇಸ್ಮಾಯಿಲ್ ಕಂಡಕರೆ

contributor

Similar News