ಏಪ್ರಿಲ್, ಮೇ ತಿಂಗಳಿನ ಕಚೇರಿ ಕೆಲಸದ ವೇಳೆ ಬದಲಾವಣೆ : ಬದಲಾದ ಸಮಯದಲ್ಲಿ ಎಂದಿನಂತೆ ಕರ್ತವ್ಯ ನಿರ್ವಹಣೆಗೆ ಜಿಲ್ಲಾಧಿಕಾರಿಗಳಿಂದ ಆದೇಶ

ರಾಯಚೂರು : ಸರ್ಕಾರದ ಆದೇಶದನ್ವಯ 2025ನೇ ಸಾಲಿನ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗ ವ್ಯಾಪ್ತಿಯ ರಾಯಚೂರು ಜಿಲ್ಲೆಯಲ್ಲಿ ಸಹ 2025ರ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕಚೇರಿ ಕೆಲಸದ ವೇಳೆ ಬದಲಾವಣೆಯಾಗಿದ್ದು, ರಾಯಚೂರು ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ ಅಡೆತಡೆಯಿಲ್ಲದೆ, ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲಾಗಿದ್ದು, ಎಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಲಾಗಿದೆ.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ ಅಡೆತಡೆಯಿಲ್ಲದೆ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯ ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.